ಮೈಸೂರು: ಸೌಜನ್ಯಾ ಪ್ರಕರಣದ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಸೌಜನ್ಯಾ ಹತ್ಯೆ ನಡೆದು 11 ವರ್ಷವಾದರೂ ಇನ್ನೂ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಆಕೆಯ ಹತ್ಯೆ ಮಾಡಿದ ನೈಜ ಆರೋಪಿಯ ಬಂಧನಕ್ಕೆ ಹೋರಾಟ ನಡೆಯುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸರ್ಕಾರ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಕಲಬುರಗಿಯ ದ್ಯಾವಂತಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಖಂಡನೀಯ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಣಿಪುರದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವುದು ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದು. ಹಿಂಸಾಚಾರ ತಡೆಯುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕು. ಮಹಿಳೆಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ಹಾಗೂ ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ನೇತೃತ್ವದ ವಿಶೇಷ ತಂಡದಿಂದ ತನಿಖೆ ನಡೆಸಬೇಕು. ವಿಚಾರಣೆಯನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಮಲ್ಲೇಶ್ ಚುಂಚನಹಳ್ಳಿ, ರಾಜಣ್ಣ, ಹನುಮಂತು, ಗೋವಿಂದರಾಜು, ಶಂಕರಪುರ ಸುರೇಶ್, ಯಶವಂತಕುಮಾರ್, ಮರಿಸ್ವಾಮಿ, ಚಿಕ್ಕಣ್ಣ, ನಾರಾಯಣ, ರವಿ ಮತ್ತಿತರರಿದ್ದರು.