ಸ್ಥಳೀಯ ಚುನಾವಣೆ ಗಂಭೀರವಾಗಿ ಪರಿಗಣಿಸಿ

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿದರು. ಚಲುವರಾಜು, ಮಮತಾ ಶಂಕರೇಗೌಡ, ಮೋಹನ್‌ಕುಮಾರ್, ರಾಮಕೃಷ್ಣ ಇತರರು ಇದ್ದರು.
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿದರು. ಚಲುವರಾಜು, ಮಮತಾ ಶಂಕರೇಗೌಡ, ಮೋಹನ್‌ಕುಮಾರ್, ರಾಮಕೃಷ್ಣ ಇತರರು ಇದ್ದರು.
Published on

ಮದ್ದೂರು: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಗಂಭೀರವಾಗಿ ಪರಿಗಣಿಸಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ರಣತಂತ್ರ ರೂಪಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಶಿವಪುರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಬರುವ ದಿನಗಳಲ್ಲಿ ಪ್ರತಿ ಗ್ರಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಪಕ್ಷದ ಬಲವರ್ಧನೆಗೆ ಗಮನ ನೀಡಬೇಕು. ಆ ಮೂಲಕ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ರಾಜ್ಯದ ಜನರ ಬದುಕಿಗೆ ಆಸರೆಯಾಗಿದೆ. ಶಾಸಕ ಕೆ.ಎಂ.ಉದಯ್ ಅವರು ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ನಿರೀಕ್ಷೆಗೂ ಮೀರಿ ತಾಲೂಕಿನ ಅಭಿವೃದ್ಧಿ ಮಾಡುವ ಜತೆಗೆ ಕ್ಷೇತ್ರದ ಜನರಿಗೆ ಸುಲಭವಾಗಿ ಸಿಗುವ ಮೂಲಕ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಇವುಗಳನ್ನು ಚುಣಾವಣಾ ಸಂದರ್ಭದಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.

ಜಿಲ್ಲೆಯ ಜೀವನಾಡಿಯಾದ ಕೆಆರ್‌ಎಸ್ ಜಲಾಶಯವು ಇತಿಹಾಸದಲ್ಲೇ ಪ್ರಥಮ ಬಾರಿಗೆ ಜೂನ್ ತಿಂಗಳಿನಲ್ಲಿಯೇ ತುಂಬಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸುವುದಕ್ಕೆ ಆಗಮಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಅಪರೂಪಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಅಭಿವೃದ್ಧಿ ಕಡೆ ಗಮನಹರಿಸದೇ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೆ ಇತ್ತೀಚೆಗೆ ಮಂಡ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನವರು ಏನು ಕಿತ್ತು ಹಾಕಿದ್ದಾರೆ ಎಂದು ಕೇವಲವಾಗಿ ಮಾತನಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದಲೇ ಮುಖ್ಯಮಂತ್ರಿ ಆಗಿದ್ದರು. ಅದನ್ನು ಮರೆತು ಈ ರೀತಿ ಮಾತನಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಏನೆಂದು ಮುಂದೆ ಕೈಪಿಡಿ ಮಾಡಿ ಕೊಡುತ್ತೇವೆ ಗೊತ್ತಿಲ್ಲದಿದ್ದರೆ ಎಚ್.ಡಿ.ಕುಮಾರಸ್ವಾಮಿ ಅವರು ಓದಿಕೊಳ್ಳಲಿ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮಮತಾ ಶಂಕರೇಗೌಡ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಚಿದಂಬರ ಮೂರ್ತಿ, ಪೊಲೀಸ್ ಮಹದೇವಪ್ಪ, ದ್ಯಾವಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net