

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಜಿಲ್ಲೆಯಲ್ಲಿ ಡಿ.16, 17ರಂದು ಆಯೋಜಿಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವ್ಯವಹಾರಗಳಿಗೆ ಅವಕಾಶವಾಗದಂತೆ ಸುಗಮ ಪರೀಕ್ಷೆ ನಡೆಸಬೇಕೆಂದು ಹೇಳಿದರು.
ಡಿ.16ಕ್ಕೆ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 27 ಅಭ್ಯರ್ಥಿಗಳು, 17 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 1680 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್‌ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷೆಗಳ ದಿನಗಳಂದು ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕೆಂದರು.
ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್‌ಗಳನ್ನು ಸಕಾಲಕ್ಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ, ಜಿಲ್ಲಾ ಖಜಾನೆ ಅಧಿಕಾರಿ ಪ್ರಭಾವತಿ ಹಾಗೂ ಡಿ.ಎಸ್.ಪಿ ರುದ್ರಪ್ಪ ಇದ್ದರು.
--