ಸ್ಲಂ ಬೋರ್ಡ್ ನಿವಾಸಿಗಳಿಗಳಿಗೆ ಶೀಘ್ರ ಹಕ್ಕುಪತ್ರ

26 crp-1
Published on

ಚನ್ನರಾಯಪಟ್ಟಣ: ಸ್ಲಂ ಬೋರ್ಡ್ ನಿವಾಸಿಗಳಿಗೆ ಖಾತೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ ಕ್ರಮವಹಿಸುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಭರವಸೆ ನೀಡಿದರು.

ಪಟ್ಟಣದ 22ನೇ ವಾರ್ಡ್‌ನ ಅರಳಿಕಟ್ಟೆ ಬಡಾವಣೆಯಲ್ಲಿ ಆಶ್ರಯ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಇ-ಆಸ್ತಿ ವಿವರಣೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸುಮಾರು 40 ವರ್ಷಗಳಿಂದ ಪಟ್ಟಣದ ಕೆಲವು ಬಡಾವಣೆಗಳಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ಇಲ್ಲದೆ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಇದ್ದ ಕಾನೂನು ತೊಡಕುಗಳನ್ನು ನಿವಾರಿಸಿ ವಸತಿ ಸಚಿವ ವಿ.ಸೋಮಣ್ಣ ಅವರ ಬಳಿ ಮನವಿ ಮಾಡಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ವಾಸವಿದ್ದ ಸುಮಾರು 480 ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದೇವೆ. 94 ಸಿಸಿ ಅಡಿಯಲ್ಲಿ 60 ಮನೆಗಳಿಗೆ ಹಕ್ಕುಪತ್ರ ನೀಡಿ ಹಕ್ಕು ಬಾದ್ಯತೆ ಇಲ್ಲದೆ ವಾಸ ಮಾಡುವ ನಿವಾಸಿಗಳಿಗೆ ಭದ್ರತೆ ಒದಗಿಸಿದ್ದೇವೆ ಎಂದು ತಿಳಿಸಿದರು.

ವಾರ್ಡ್ ನಂ.22ರಲ್ಲಿನ ಪೇಟೆ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಸುಂದರವಾದ ಉದ್ಯಾನವನವನ್ನು ನಿರ್ಮಾಣ ಮಾಡಿ ಈ ಭಾಗದ ಸಾರ್ವಜನಿಕರಿಗೆ ವಾಯು ವಿಹಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಅಲ್ಲದೆ, ಈ ಭಾಗದ ಮಕ್ಕಳು ಉಚಿತ ಶಿಕ್ಷಣ ಪಡೆಯುವ ಉದ್ದೇಶದಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ರೀತಿ ಸರ್ಕಾರಿ ಶಾಲೆಯಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷೆ ರೇಖಾ ಅನಿಲ್, ಉಪಾಧ್ಯಕ್ಷೆ ಲಕ್ಷ್ಮೀ ವೆಂಕಟೇಶ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಬನಶಂಕರಿ ರಘು, ಸದಸ್ಯ ಗಣೇಶ್, ಮಾಜಿ ಅಧ್ಯಕ್ಷರಾದ ಸಿ.ಟಿ. ಅಶೋಕ್, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೆಂಕಟೇಶ್, ಟಿಎಪಿಸಿಎಂಎಸ್ ನಿರ್ದೇಶಕ ಅನಿಲ್ ಮರಗೂರು ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net