

ಬೆಂಗಳೂರು ಗ್ರಾಮಾಂತರ: ಅಂತರ್ಜಲಕ್ಕೆ ಮಾರಕವಾಗಿರುವ ನೀಲಗಿರಿ ಮರಗಳನ್ನು ರೈತರು ಸ್ವ- ಇಚ್ಛೆಯಿಂದ ತೆರವುಗೊಳಿಸಬೇಕು. ಈ ಬಗ್ಗೆ ಅಧಿಕಾರಿಗಳು ರೈತರಲ್ಲಿ ಅರಿವು ಮೂಡಿಸಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಪಂ ಕಚೇರಿಯಲ್ಲಿ ಶನಿವಾರ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕೆರೆಯಂಗಳದಲ್ಲಿ ಬೆಳೆದಿರುವ ಜಾಲಿ ಮರಗಳನ್ನು ಹರಾಜು ಮೂಲಕ ತೆರವುಗೊಳಿಸಿ, ಬರುವ ಆದಾಯವನ್ನು ಸ್ಥಳೀಯ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಸಂದಾಯ ಮಾಡಬೇಕು ಎಂದು ತಿಳಿಸಿದರು.
ಯಾವುದೇ ನದಿ ಮೂಲವಿಲ್ಲದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ, ನೀಲಗಿರಿ ಮರಗಳು ಅಂತರ್ಜಲಕ್ಕೆ ಮಾರಕವಾಗಿರುವುದರಿಂದ ಅಧಿಕಾರಿಗಳು ಸಮರೋಪಾದಿಯಲ್ಲಿ ನೀಲಗಿರಿ ತೆರವಿಗೆ ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ 337 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿನ ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದು, ಆರ್ಥಿಕ ಸ್ಥಿತಿಗತಿ ಸುಧಾರಿಸುವ ನಿಟ್ಟಿನಲ್ಲಿ ಅನ್‌ಲಾಕ್ ಮಾಡಲಾಗುತ್ತಿದೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೋವಿಡ್ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪರೀಕ್ಷೆಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಸ ವಿಲೇವಾರಿ ಯಶ: ಸ್ವಚ್ಛ ಭಾರತ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಹಸಿ ಹಾಗೂ ಒಣ ತ್ಯಾಜ್ಯ ಪ್ರತ್ಯೇಕವಾಗಿ ವಿಂಗಡಣೆ ಮಾಡಲಾಗುತ್ತಿದ್ದು, ವಿಲೇವಾರಿಗೆ ಯಾವುದೇ ತೊಂದರೆ ಇಲ್ಲ. ಆದರೆ ದೇವನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಇರುವುದರಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ತ್ಯಾಜ್ಯ ವಿಲೇವಾರಿಗೆ ಜಾಗ ಗುರುತಿಸಲಾಗಿದೆ ಎಂದು ಸಿಒಒ ಎಂ.ಆರ್.ರವಿಕುಮಾರ್ ತಿಳಿಸಿದರು.
ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನ ಬೇಕು: ದೇವನಹಳ್ಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಹೆಚ್ಚಿನ ಹಣಕಾಸು ನೆರವು ನೀಡುವಂತೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ಕುರಿತು ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.
ದೇವನಹಳ್ಳಿ ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಇದ್ದು, ತ್ಯಾಜ್ಯವನ್ನು ಡೀಮ್ಡ್ ಅರಣ್ಯದಲ್ಲಿ ವಿಲೇವಾರಿ ಮಾಡಬಹುದೇ ಎಂದು ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಇದರಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ತಾಲೂಕಿನಲ್ಲಿ ಈಗಾಗಲೇ ವಿದುತ್ ಚಿತಾಗಾರ ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಚಿತಾಗಾರ ನಿರ್ಮಾಣಕ್ಕೆ 3 ಕೋಟಿ ರೂ.ಹಣ ಮೀಸಲಿಡಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಡಿಡಿಪಿಐ ಗಂಗಮಾರೇಗೌಡ ಮತ್ತಿತರರಿದ್ದರು.