ಸ್ವಚ್ಛತೆ, ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಗ್ರಾಮಾಭಿವೃದ್ಧಿ ಸಾಧ್ಯ:ಪಿಡಿಒ ಎಚ್. ಪುಷ್ಪಲತಾ ಅಭಿಮತ

ಸ್ವಚ್ಛತೆ, ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಗ್ರಾಮಾಭಿವೃದ್ಧಿ ಸಾಧ್ಯ:ಪಿಡಿಒ ಎಚ್. ಪುಷ್ಪಲತಾ ಅಭಿಮತ
Published on

ಹಾಸನ: ಗ್ರಾಮದಲ್ಲಿ ಸ್ವಚ್ಛತೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ರೀತಿಯಲ್ಲಿ ಆದ್ಯತೆ ನೀಡಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿಗೆ ಸಾಧ್ಯ ಎಂದು ಕಟ್ಟಾಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್. ಪುಷ್ಪಲತಾ ತಿಳಿಸಿದರು.
ತಾಲೂಕಿನ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದಲ್ಲಿ ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಶ್ರಮದಾನ ಶಿಬಿರದ ಸಮಾರಂಭದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸರಬರಾಜು, ರಸ್ತೆಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗಮನಹರಿಸಿ ಕೆಲಸ ಕೈಗೊಳ್ಳುತ್ತೇವೆ. ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಗ್ರಾಮಗಳಲ್ಲಿ ಶ್ರಮದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿ ವಿಚಾರಗಳನ್ನು ಹಾಗೂ ಸ್ವಚ್ಛತೆ ಬಗ್ಗೆ ಗ್ರಾಮೀಣ ಪ್ರದೇಶ ಜನರಿಗೆ ಮಾರ್ಗದರ್ಶನ ನೀಡಲು ನೆರವಾಗಿದೆ ಎಂದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಅಧೀಕ್ಷಕ ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸದ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಇಂಥ ಸೇವಾ ಕಾರ್ಯ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಎಲ್ಲಾ ವಿಚಾರಗಳನ್ನು ಒಳಗೊಂಡಂತೆ ತಿಳಿವಳಿಕೆ ಸಿಗುತ್ತದೆ ಎಂದು ಹೇಳಿದರು.
ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಧುಸೂದನ್ ಮಾತನಾಡಿ, ಗ್ರಾಮದ ಸೋಮೇಶ್ವರ ದೇವಸ್ಥಾನದ ಉದ್ಘಾಟನೆ ಯಶಸ್ವಿಯಾಗಿ ನಡೆದಿದೆ. ಇಂಥ ಸಂದರ್ಭದಲ್ಲಿ ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನದಂತಹ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ನಮ್ಮ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಬ್ಯಾಡರಹಳ್ಳಿ ಗ್ರಾಮದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಬಸಪ್ಪ, ಉಪಾಧ್ಯಕ್ಷ ಬಿ.ಆರ್. ಶಿವಣ್ಣ, ಗ್ರಾಮದ ಮುಖಂಡರಾದ ಸ್ವಾಮಿ ದೇವರು, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪರಮೇಶ್, ಶಿಕ್ಷಕರಾದ ಚಂದ್ರಕಲಾ, ವೆಂಕಟೇಶ್, ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ನೌಕರರಾದ ಗಿರೀಶ್, ಪದ್ಮರಾಜ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net