

ಹಾಸನ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಲ್ಲದಂತೆ ಅಚ್ಚುಕಟ್ಟಾಗಿ ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮಾವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಂಬಂದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆ.15ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದರು. ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳಿಗೆ ಆ.14 ಮತ್ತು 15 ರಂದು ತಪ್ಪದೆ ದೀಪಾಲಂಕಾರ ವ್ಯವಸ್ಥೆ ಮಾಡವೇಕು. ನಗರದ ಮೂರು ಮುಖ್ಯ ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ನಿರ್ದೇಶನ ನೀಡಿದರು.
ಮಳೆ ಬಂದರೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಜರ್ಮನ್ ಟೆಂಟ್ ಅಳವಡಿಕೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಆಕರ್ಷಕ ಪಥ ಸಂಚಲನಕ್ಕಾಗಿ ತಾಲೀಮು ನಡೆಸಲು ಕ್ರಮವಹಿಸುವಂತೆ ತಿಳಿಸಿದರು. ಈಗಾಗಲೇ ರಚಿಸಿರುವ ಉಪ ಸಮಿತಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಸ್ವಾತಂತ್ರ್ಯ ಸಂಗ್ರಮ ಕುರಿತು ಶಾಲಾ ಮಕ್ಕಳಿಂದ ವೈಭವಯುತವಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆಗೆ ಕ್ರಮವಹಿಸಿ, ಶಾಲಾ ಕಾಲೇಜುಗಳಲ್ಲಿ ಚರ್ಚಾ ಸ್ಪರ್ಧೆ ಹಾಗೂ ಉಪನ್ಯಾಸ ಏರ್ಪಡಿಸುವಂತೆ ತಿಳಿಸಿದರು. ಪ್ರಾಥಮಿಕ, ಪ್ರೌಢಶಾಲೆ ಪದವಿ ಪೂರ್ವ ಮತ್ತು ಪದವಿ ಕಾಲೇಜು ಹಂತದಲ್ಲಿ ಸ್ಪರ್ಧೆಯಲ್ಲಿ ಆಯ್ಕೆಯಾದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಮೊದಲ ಮತ್ತು ಎರಡನೇ ಬಹುಮಾನ ನೀಡಲು ಸೂಚಿಸಿದರು.
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳ ಹೊರ ಮತ್ತು ಒಳ ಆವರಣಗಳನ್ನು ಸ್ವಚ್ಚತೆಗೆ ಗಮನಹರಿಸಬೇಕು. ಈ ಬಾರಿ ವಿಶೇಷವಾಗಿ 2000 ಅಡಿಯ ರಾಷ್ಟ್ರಧ್ವಜವನ್ನು ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳು ಸೇರಿದಂತೆ ಒಟ್ಟು 1000 ಮಕ್ಕಳು ರಾಷ್ಟ್ರಧ್ವಜವನ್ನು ಹಿಡಿದು ಜಿಲ್ಲಾಧಿಕಾರಿ ಕಚೇರಿಯಿಂದ ಮೆರವಣಿಗೆ ಮೂಲಕ ಜಿಲ್ಲಾ ಕ್ರೀಡಾಂಗಣ ತಲುಪುವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಯಾವುದೇ ದಕ್ಕೆ ಉಂಟಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಸಭೆಯಿಂದ ನಗರದ ಸ್ವಚ್ಚತೆಗೆ ಹೆಚ್ಚಿನ ನಿಗಾವಹಿಸುವಂತೆ ಸೂಚಿಸಿದರಲ್ಲದೆ, ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನಿರೀಕ್ಷಿತ ದಾಳಿ ಮಾಡಿ ದಂಡ ವಿಧಿಸುವಂತೆ ಪೌರಾಯುಕ್ತರಿಗೆ ತಿಳಿಸಿದರು. ನಗರದ ಸ್ವಚ್ಚತೆಗಾಗಿ ಸ್ವಚ್ಚ ಶನಿವಾರ ಪ್ರತಿ ಮಾಹೆಯ ಮೊದಲ ಮತ್ತು ಮೂರನೇ ಶನಿವಾರ ಶ್ರಮದಾನ ಮಾಡಲಾಗುತ್ತಿದ್ದು, ಆ.3 ರಂದು ನಡೆದ ಶ್ರಮದಾನದಲ್ಲಿ ಕೆಲವು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು. ಮುಂದೆ ನಡೆಯುವ ಶ್ರಮದಾನದಲ್ಲಿ ಎಲ್ಲಾ ಅಧಿಕಾರಿಗಳು ಭಾಗವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್, ಉಪ ವಿಭಾಗಾಧಿಕಾರಿ ಮಾರುತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.