ಹಕ್ಕುಗಳ ಬಗ್ಗೆ ಅರಿತುಕೊಳ್ಳಿ

web
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿತುಕೊಳ್ಳಬೇಕು. ಮಕ್ಕಳು ಅಭ್ಯಾಸದ ಜತೆಗೆ ಕ್ರೀಡೆಯಲ್ಲಿ ಸಹ ಪಾಲ್ಗೊಂಡು ತಮ್ಮ ಬಾಲ್ಯ ಕಳೆಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹೇಳಿದರು.
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ನಿಮಿತ್ತ ಜಿಲ್ಲಾಡಳಿತ, ಜಿಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಶಿಕ್ಷಕಿಯರ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಕೆಲಸ ಮಾಡುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಸಂಪರ್ಕಿಸಬಹುದು. ಮಕ್ಕಳು ಒಳ್ಳೆ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ಮಾತನಾಡಿ, ಮಕ್ಕಳು ಬಾಲ್ಯದ ಅಮೂಲ್ಯ ಕ್ಷಣಗಳನ್ನು ವ್ಯರ್ಥ ಮಾಡದೆ ವಿದ್ಯಾವಂತರಾಗಬೇಕು ಎಂದರು.
ಬಾಲಕಾರ್ಮಿಕ ಶಾಲೆಯಲ್ಲಿ ಕಲಿತು ಮುಖ್ಯ ವಾಹಿನಿಗೆ ಬಂದ ಇಬ್ಬರು ಬಾಲ ಕಾರ್ಮಿಕರು, ಜಿಲ್ಲೆಯಲ್ಲಿ ಕಳೆದ 2 ವರ್ಷಗಳಲ್ಲಿ ಅತೀ ಹೆಚ್ಚು ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಭುವನೇಶ್ವರಿ ಕೋಟಿಮಠ, ಅಕ್ರಮ ಅಲ್ಲಾಪುರ ಅವರನ್ನು ಸನ್ಮಾನಿಸಲಾಯಿತು.
ಡಿಡಿಪಿಐ ಎಸ್.ಎಸ್. ಕೆಳದಮಠ, ಮಾರಿಕಾಂಬ ಹುಲಕೋಟಿ, ಸಂಗೀತ ಬೆನಕನಕಟ್ಟಿ, ಸಂಗೀತಾ ಲಕ್ಕುಂಡಿ, ಸಿದ್ದಲಿಂಗಪ್ಪ ವಗ್ಗರ, ಲಲಿತಾ ಸಾತೇನಹಳ್ಳಿ, ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್., ಬಸವರಾಜ ಪಂಚಾಕ್ಷರಿಮಠ ಇದ್ದರು.
ನಂತರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಗೊಂಬೆ ಆಟ ಪ್ರದರ್ಶನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net