

ಹನೂರು: ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು.
ಪಟ್ಟಣದ ಬಿಆರ್‌ಸಿ ಕೇಂದ್ರದ ಆವರಣದಲ್ಲಿ ಶನಿವಾರ ಸ್ವೀಪ್ ಸಮಿತಿ ವತಿಯಿಂದ ಮತದಾನದ ಜಾಗೃತಿ ಕುರಿತು ಆಯೋಜಿಸಿದ್ದ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಚುನಾವಣೆ ಆಯೋಗವು ಮತದಾನದ ಮಹತ್ವ ಕುರಿತು ಜಾಗೃತಿ ಮೂಢಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ದಿಸೆಯಲ್ಲಿ ಬೈಕ್ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮತದಾನ ಸದೃಢ ದೇಶವನ್ನು ನಿರ್ಮಿಸುವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಪ್ರಬಲ ಅಸ್ತ್ರವಾಗಿದೆ. ಆದ್ದರಿಂದ ಪ್ರತಿಯೊಂದು ಮತವು ನಿರ್ಣಾಯಕ ಪಾತ್ರ ವಹಿಸುತ್ತದೆ. ಹಾಗಾಗಿ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಈ ಮೂಲಕ ಮೇ 10 ರಂದು ಮತದಾನದ ಹಬ್ಬವಾಗಿ ಆಚರಿಸಬೇಕು. ಅಲ್ಲದೇ ಹೊಸದಾಗಿ ನೋಂದಣಿಯಾಗಿರುವ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ತಿಳಿಸಿದರು.
ಬಳಿಕ ವಿವಿಧ ಇಲಾಖೆಯ ಅಧಿಕಾರಿಗಳು, ನೌಕರರು ಹಾಗೂ ಮಹಿಳಾ ಸಂಘ ಸಂಸ್ಥೆಯ ಪ್ರತಿನಿಧಿಗಳು ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ಜನರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹ.ಮಾ.ಗುರುಸ್ವಾಮಿ, ತಾಪಂ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ರವೀಂದ್ರ, ಪಿಡಿಒಗಳಾದ ನಾಗರಾಜ ಮೂರ್ತಿ, ನಂಜುಂಡಸ್ವಾಮಿ, ರಾಮು, ಸಿಆರ್‌ಪಿ ದೇವರಾಜು ಇತರರು ಇದ್ದರು.