ಹಸಿರು ವಿದ್ಯುತ್ ಉತ್ಪಾದನೆಗೆ ಆದ್ಯತೆ; ರಾಜ್ಯದಲ್ಲಿ 1,008 ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ವಿ.ಸುನೀಲ್‌ಕುಮಾರ್

WEB SOR
Published on

ಸೊರಬ: ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅವಲಂಬನೆ ಕಡಿಮೆ ಮಾಡುವುದರ ಜತೆಗೆ ಪರಿಸರ ಸಂರಕ್ಷಣೆ ಉದ್ದೇಶದಿಂದ ಹಸಿರು ವಿದ್ಯುತ್ ಉತ್ಪಾದನೆ ಆದ್ಯತೆ ನೀಡಿ ರಾಜ್ಯದಲ್ಲಿ 1,008 ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್‌ಕುಮಾರ್ ಹೇಳಿದರು.

ಗುರುವಾರ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಸೆಂಟರ್‌ಗಳನ್ನು ಸ್ಥಾಪನೆ ಮಾಡಲಿದೆ ಎಂದು ಹೇಳಿದರು.

ಪರಿಸರಕ್ಕೆ ಹಾನಿಯಾಗದಂತೆ ಸೌರ ಹಾಗೂ ಪವನ ಶಕ್ತಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಶಾಸಕ ಕುಮಾರ್ ಬಂಗಾರಪ್ಪ ಅವರ ಅವಿತರ ಪ್ರಯತ್ನ ಹಾಗೂ ಅರಣ್ಯ ಇಲಾಖೆಯ ಅಡೆತಡೆಗಳನ್ನು ನಿವಾರಿಸಿದ್ದರ ಪರಿಣಾಮ ಕುಪ್ಪಗಡ್ಡೆ ಗ್ರಾಮದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗುತ್ತಿದೆ. ಇದರಿಂದ ಸುತ್ತಲಿನ ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಅನುಕೂಲವಾಗಲಿದೆ ಎಂದರು.

ಅಭಿವೃದ್ಧಿ ನಿರಂತರ ಪ್ರಕ್ರಿಯೆಯಾಗಿದ್ದು, ಜನತೆಯ ಇಚ್ಛಾನುಸಾರ ಸೌಲಭ್ಯಗಳನ್ನು ಕಲ್ಪಿಸುವುದು ಸರ್ಕಾರಗಳ ಜವಾಬ್ದಾರಿ. ರಾಜ್ಯ ಸರ್ಕಾರ ವಿಶೇಷವಾಗಿ ರೈತರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿದೆ. ಕೃಷಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ವಿದ್ಯುತ್ ಇಲ್ಲದೆ ಬದುಕು ಸಾಧ್ಯವಿಲ್ಲ ಎನ್ನುವ ಹಂತದಲ್ಲಿ ಜೀವಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net