

ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ಮನೆ, ಬೆಳೆಗಳು ಹಾನಿಗೊಳಗಾಗಿದ್ದು, ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಮತ್ತು ಜಿ.ಪಂ ಸಿಇಒ ಟಿ.ಭೂಬಾಲನ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೀಳಗಿ ತಾಲೂಕಿನ ಸುನಗ ಗ್ರಾಮಕ್ಕೆ ಭೇಟಿ ನೀಡಿದಾಗ ಈರುಳ್ಳಿ ಬೆಳೆ ನೀರಿನಲ್ಲಿ ನಿಂತಿದ್ದು, ಕಟಾವು ಮಾಡಿದ ಫಸಲು ಹಾಳಾಗಿರುವುದು ವೀಕ್ಷಿಸಿದರು. ಸಿದ್ದಾಪುರ ಮತ್ತು ಮಂಟೂರ ಗ್ರಾಮಗಳಲ್ಲಿ ಮೆಕ್ಕೆಜೋಳ ಬೆಳೆ ಹಾನಿಯಾಗಿರುವದನ್ನು ಪರಿಶೀಲಿಸಿ ಅಂದಾಜು ಹಾನಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ರೈತರ ಜೊತೆ ಮಾತನಾಡಿ ಸರ್ಕಾರದಿಂದ ಹಾನಿಗೆ ಸೂಕ್ತ ಪರಿಹಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಮಖಂಡಿ ಉಪ ವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲಕುಮಾರ ಬಾವಿದಡ್ಡಿ, ಕೃಷಿ ಇಲಾಖೆಯ ಉಪನಿರ್ದೇಶಕ ಕೆ.ಎಸ್.ಅಗಸನಾಳ, ಕೃಷಿ ಸಹಾಯಕ ನಿರ್ದೇಶಕರಾದ ಸತೀಶ ಮಾನಿವಕೊಪ್ಪ ಇದ್ದರು.