

ಗುಂಡ್ಲುಪೇಟೆ: ಕಾಂಗ್ರೆಸ್ ಎಂದಿಗೂ ಬಡವರ, ರೈತರ, ಹಿಂದುಳಿದ ವರ್ಗದವರ, ಅಲ್ಪಸಂಖ್ಯಾತರ ಪರವಾಗಿದ್ದು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ಮುಖಂಡರನ್ನು ಎಂದಿಗೂ ಕೈ ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅನುದಾನದ ಕೊರತೆ ಆಗದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೂ ಬಿಜೆಪಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ. ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಉತ್ಪಾದಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಹಾಲಿನ ಬೆಲೆ ಹೆಚ್ಚಿಸಲಾಗಿದೆ. ಇದರ ಲಾಭ ನೇರವಾಗಿ ಉತ್ಪಾದಕರಿಗೆ ತಲುಪಲಿದೆ. ಈ ಬಗ್ಗೆ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಸರ್ಕಾರ ರಚನೆಯಾಗಲು ಕಾರ್ಯಕರ್ತರೇ ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗಾಗಿ ಅವರಿಗೆ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ನಡೆಯುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಸಂಪೂರ್ಣ ಅಧಿಕಾರ ಕೊಡಿ ಎಂದು ಮನವಿ ಮಾಡಿದರು.
ಏ.24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದು ವಿಶೇಷವಾಗಿ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಮುಖ್ಯಮಂತ್ರಿ ಅವರು ಅನುದಾನ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದರು.
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ಹಿಂದಿನ ಶಾಸಕರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಆಪ್ತರಾಗಿದ್ದರೂ ತಮ್ಮ ಅವಧಿಯಲ್ಲಿ ಕ್ಷೇತ್ರದ ಕೆಲಸಗಳನ್ನು ಮಾಡಲಾಗದೆ ಕೈ ಚೆಲ್ಲಿದರು. ಆದರೆ ನಾನು ಶಾಸಕನಾದ ಕೆಲವೇ ತಿಂಗಳಲ್ಲಿ ನನೆಗುದ್ದಿಗೆ ಬಿದ್ದಿದಂತಹ ಬೊಮ್ಮನಹಳ್ಳಿ ಅಂಬೇಡ್ಕರ್ ವಸತಿ ಶಾಲೆ, ಬೇಗೂರು ಹತ್ತಿ ಮಾರುಕಟ್ಟೆ, ಗರಗನಹಳ್ಳಿ ಮುರಾರ್ಜಿ ವಸತಿ ಶಾಲೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಪುರಸಭೆ ಅಧ್ಯಕ್ಷ ಜಿ.ಎಸ್.ಮಧುಸೂದನ್, ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಸದಸ್ಯ ಶಶಿಧರ್, ಮಾಜಿ ಸದಸ್ಯೆ ಲತಾ ರಾಜಶೇಖರ ಜತ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುನಿರಾಜು, ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಬಿ.ಕುಮಾರಸ್ವಾಮಿ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಜಿ.ಕೆ.ಲೋಕೇಶ್ ಇದ್ದರು.