

ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದ ಶಕ್ತಿ ಯೋಜನೆಗೆ ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಭಾನುವಾರ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು, ಹಳ್ಳಿಗಾಡು ಪ್ರದೇಶದ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಅವರನ್ನು ಸಮಾಜದ ಆಸ್ತಿಯನ್ನಾಗಿ ಪರಿವರ್ತಿಸಬೇಕು. ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಸರ್ಕಾರವು ಶಕ್ತಿ ಯೋಜನೆಯನ್ನು ಭಾನುವಾರದಿಂದ ಅನುಷ್ಠಾನಕ್ಕೆ ತಂದಿದೆ. ಎಲ್ಲಾ ಸಮುದಾಯದ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಹಾಸನ ಜಿಲ್ಲೆಯ ಉಸ್ತುವಾರಿ ನೀಡಿರುವ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಸಚಿವರು ಜನಪರವಾದ ಕೆಲಸ ಮಾಡಲು ಪ್ರಯತ್ನಿಸುವುದಾಗಿ ಹೇಳಿದರಲ್ಲದೆ, ಅಧಿಕಾರಿಗಳು ಅಸಹಾಯಕರಿಗೆ ಸ್ಪಂದಿಸಿ ನ್ಯಾಯುತವಾಗಿ ಕೆಲಸ ಮಾಡುವಂತೆ ತಿಳಿಸಿದರು.
ಇಂತಹ ಉತ್ತಮವಾದಂತಹ ಯೋಜನೆಯ ಉದ್ಘಾಟನೆ ಸಂದರ್ಭದಲ್ಲಿ ಸ್ಥಳೀಯ ಶಾಸಕರು ಹಾಜರಿರದೆ ಗೈರಾಗಿದ್ದಾರೆ ಇದರಿಂದ ಅವರು ಮಹಿಳೆಯರಿಗೆ ಸಿಗುವಂತಹ ಯೋಜನೆಯ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಣಿಸುತ್ತಿದೆ ಎಂದರು.
ರಾಜ್ಯದಲ್ಲೇ ಜಿಲ್ಲೆ ಒಂದು ವಿಶಿಷ್ಟವಾದಂತಹ ಸ್ಥಾನವಿದೆ. ಈ ಜಿಲ್ಲೆಯಿಂದ ಆಯ್ಕೆಯಾಗಿ ಪ್ರಧಾನಿಯನ್ನು ತಂದು ಕೊಟ್ಟಂತಹ ಜಿಲ್ಲೆಯಲ್ಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ, ಸಮಸ್ಯೆಗಳನ್ನು ಅರಿತು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಕೆ.ಎಸ್.ಆರ್.ಟಿ.ಸಿ ಉಪ ವಿಭಾಗಾಧಿಕಾರಿ ಅರುಣ ಅವರು ಪ್ರಸಾವಿಕವಾಗಿ ಮಾತನಾಡಿ, ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೊಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ, ರಾಜ್ಯದ ಒಳಗೆ ಸಂಚಾರ ಮಾಡುವ ಎಲ್ಲಾ ವೇಗದೂತ ಸೇರಿದಂತೆ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.
ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆ ತೋರಿಸಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ನಗರ ಸಭೆ ಅಧ್ಯಕ್ಷ ಮೋಹನ್, ಹೆಚ್.ಎಂ.ಶಿವಣ್ಣ, ಗೋಪಾಲಸ್ವಾಮಿ, ಅಪರ ಜಿಲ್ಲಾಧಿಕಾರಿ ಆನಂದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಮೊದಲ ದಿನವೇ ಅಧಿಕಾರಿಗಳಿಗೆ ಎಚ್ಚರಿಕೆ.
ಜಿಲ್ಲೆಯಲ್ಲಿರುವಂತಹ ಅಧಿಕಾರಿಗಳು ಕೆಲ ವ್ಯಕ್ತಿಗಳ ಪ್ರಭಾವಕ್ಕೆ ಒಳಗಾಗಿ ಬಡವರ ಪರ ಕೆಲಸ ಮಾಡದೆ ಇದ್ದರೆ ಅಂತವರನ್ನು ನಾನು ಸಹಿಸುವುದಿಲ್ಲ ಎಂದು ಮೊದಲ ದಿನವೇ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಎಲ್ಲಾ ವರ್ಗದವರನ್ನ ಸಮಾನವಾಗಿ ಕಾಣಲಾಗುತ್ತದೆ. ಎಲ್ಲಾ ಜಾತಿಯಲ್ಲಿ ಕೂಡ ಬಡವರು ಇರುತ್ತಾರೆ. ಅವರೆಲ್ಲರಿಗೂ ಮೂಲಭೂತ ಸೌಕರ್ಯವನ್ನು ಕಲ್ಪಿಸುವ ಜವಾಬ್ದಾರಿ ತಮ್ಮೆಲ್ಲರದಾಗಿರುತ್ತದೆ,ಇದರಲ್ಲಿ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಸೂಚನೆ ನೀಡಿದರು.
ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ದರ್ಬಾರ್!
ಸರ್ಕಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಇದನ್ನ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡು ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗಿಂತ ಹೆಚ್ಚಾಗಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ಮತ್ತು ಮುಖಂಡರೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಿ ಮೂಲಕ ಕೈ ನಾಯಕರ ದರ್ಬಾರು ಜೋರಾಗಿತ್ತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆನಂದ್ ಮತ್ತು ನಗರಸಭೆ ಅಧ್ಯಕ್ಷ ಮೋಹನ್, ಎಎಸ್‌ಪಿ. ತಮ್ಮಯ್ಯ, ಸಾರಿಗೆ ಇಲಾಖೆ ಅಧಿಕಾರಿ ಅರುಣ್ ಇವರನ್ನು ಬಿಟ್ಟರೆ ಉಳಿದಂತೆ ಪರಾಜಿತ ಅಭ್ಯರ್ಥಿಗಳಾದ ಬನವಾಸಿ ರಂಗಸ್ವಾಮಿ, ಎಂ.ಎ. ಗೋಪಾಲಸ್ವಾಮಿ, ಶ್ರೀಧರ್, ಮುರಳಿ ಮೋಹನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಈ.ಲಕ್ಷ್ಮಣ್ ಮುಖಂಡರಾದ ಅನಿಲ್ ಕುಮಾರ್, ಜಾವಗಲ್ ಮಂಜುನಾಥ್, ಬಾಗೂರು ಮಂಚೇಗೌಡ ಸೇರಿದಂತೆ ಹಲವರು ವೇದಿಕೆಯಲ್ಲಿ ಆಸೀನರಾಗಿದರು.
ಶಾಸಕ ಸ್ವರೂಪ ಪ್ರಕಾಶ್ ಗೈರು:-ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಕ್ಷೇತ್ರದ ಶಾಸಕ ಸ್ವರೂಪ ಪ್ರಕಾಶ್ ಗೈರು ಹಾಜರಾಗಿದ್ದರು.ಜಿಲ್ಲಾ ಉಸ್ತುವಾರಿ ಸಚಿವರು ಮೊದಲ ಬಾರಿಗೆ ಹಾಸನಕ್ಕೆ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸುವ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಉಪಸ್ಥಿತಿ ಇರುವುದು ಸರ್ವೇಸಾಮಾನ್ಯ ಆದರೆ ಸ್ವರೂಪ್ ಅವರು ಗೈರು ಹಾಜರಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮಹಿಳೆಯರಿಗೆ ಟಿಕೆಟ್ ನೀಡಿದ ಉಸ್ತುವಾರಿ ಸಚಿವರು:-ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಆರಂಭಿಸಿರುವ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನ ಭಾನುವಾರ ಉದ್ಘಾಟಿಸಿದ್ದು, ಇದರ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಅವರು ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದರು.
ನಗರದ ಹೊಸ ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ, ಗ್ರಾಮೀಣ ಮತ್ತು ತಡೆರಹಿತ ಮೂರು ಬಸ್ಸುಗಳನ್ನು ಹೂವಿನ ಅಲಂಕಾರದಿಂದ ಶೃಂಗರಿಸಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮೊದಲು ಟೇಪ್ ಕತ್ತರಿಸಿ ನಂತರ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಉದ್ಘಾಟಿಸಿದರು.