

ಹಾಸನ: ಹಾಸನಂಬ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಯಾವುದೇ ರೀತಿ ಸಮಸ್ಯೆ ಆಗದಂತೆ 1200 ಸಿಬ್ಬಂದಿಯನ್ನು ನೇಮಕ ಮಾಡಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ದಕ್ಷಿಣ ವಲಯದ ಮಹಾನಿರ್ದೇಶಕ ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದರು.
ನಗರದ ಹಾಸನಾಂಬ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ನಂತರ ಡಿಸಿ ಸಿ. ಸತ್ಯಭಾಮಾ ಮತ್ತು ಎಸ್‌ಪಿ ಮೊಹಮ್ಮದ್ ಸುಜೀತಾ ಅವರಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುವ ಪ್ರಮುಖ ಉತ್ಸವಗಳಲ್ಲಿ ಹಾಸನಾಂಬ ಉತ್ಸವ ಪ್ರಮುಖವಾಗಿದೆ. ನ. 2ರಂದು ಆರಂಭವಾಗುವ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಕಲ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಈಗಾಗಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ 10 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಹೊಂದಿದೆ. ಅದಕ್ಕೆ ತಕ್ಕಂತೆ ಪಾಕಿರ್ಂಗ್ ವ್ಯವಸ್ಥೆ, ಭಕ್ತರಿಗೆ ಅನುಕೂಲವಾಗಲು ಬ್ಯಾರಿಕೆಟ್ ವ್ಯವಸ್ಥೆ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಪರಿಶೀಲನೆ ನಡೆಸಲಾಗಿದ್ದು ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತೆಯನ್ನು ನೀಡಲಾಗುವುದು ಎಂದರು.
ಹಿಂದಿನ ವರ್ಷದಲ್ಲಿ ದೇವಿಯ ದರ್ಶನಕ್ಕೆ ಬೆಳಗ್ಗೆಯಿಂದ ರಾತ್ರಿ 11ವರೆಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಈ ಬಾರಿ ದಿನದ 24 ಗಂಟೆಯೂ ಕೂಡ ದರ್ಶನ ಇರುತ್ತದೆ. ಈ ಸಂದರ್ಭದಲ್ಲಿ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ಭದ್ರತೆ ನೀಡಲಾಗುವುದು. ಭದ್ರತೆಗಾಗಿ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಬೆಂಗಳೂರು ಜಿಲ್ಲೆಗಳ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗುವುದು. ಹೆಚ್ಚುವರಿಯಾಗಿ ಬೆಂಗಳೂರು ಮತ್ತು ಕೆಎಸ್‌ಆರ್‌ಪಿ ತುಕಡಿ ಹಾಗೂ ಹೋಂ ಗಾರ್ಡ್ಸ್‌ಗಳನ್ನು ಕೂಡ ನಿಯೋಜನೆ ಮಾಡಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ದೇವಸ್ಥಾನದ ಆಡಳಿತ ಅಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.