ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಅಳಿಸಿ

MUDNAL
Published on

ವಿಜಯವಾಣಿ ಸುದ್ದಿಜಾಲ ಯಾದಗಿರಿ

ಯಾದಗಿರಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಅಳಿಸಲು ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕಾದ ಅಗತ್ಯವಿದೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ಕರೆ ನೀಡಿದರು.

50 ಲಕ್ಷ ರೂ.ವೆಚ್ಚದಲ್ಲಿ ಬಾಲಕರ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಶುದ್ಧ ಕುಡಿವ ನೀರು, ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿ ಪ್ರವೇಶ ಪಡೆಯುವ ಮಕ್ಕಳು ತಂದೆ-ತಾಯಂದಿರ ಆಶಯದಂತೆ ಚನ್ನಾಗಿ ಅಭ್ಯಾಸ ಮಾಡಿ ತಮ್ಮ ಗುರಿ ಸಾಧಿಸಬೇಕು ಎಂದು ಕಿವಿ ಮಾತು ಹೇಳಿದರು.

ತಂದೆ, ತಾಯಿ ಬಿಟ್ಟರೆ ಶಿಕ್ಷಕರಿಗೆ ಬಹುದೊಡ್ಡ ಸ್ಥಾನವಿದೆ. ಹಾಗಾಗಿ ನೂತನ ವಸತಿ ನಿಲಯದಲ್ಲಿ ವಿದಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆ ಇರುವುದು ನನ್ನ ಗಮನಕ್ಕೆ ಬಂದರೆ ಅಂತಹ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಮ್ಮ ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗೆ ಸದಾ ಬದ್ಧವಾಗಿದೆ. ನಾನು ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಜನತೆ ನೀಡಿದ ಭರವಸೆ ಈಡೇರಿಸುತ್ತಿರುವ ತೃಪ್ತಿ ಇದೆ. ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಅಭ್ಯುದಯಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಮುಂದೆಯೂ ನಿಮ್ಮ ಆಶೀರ್ವಾದಿಂದ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ದುಡಿಯುವುದಾಗಿ ಹೇಳಿದರು.

ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ಶರಣಗೌಡ ಬಾಡಿಯಾಳ, ಕನರ್ಾಟಕ ವಸತಿ ಶಿಕ್ಷಣ ಸಂಘದ ಎಇಇ ವೆಂಕಟರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೆನ್ನಬಸವಣ್ಣ ಇದ್ದರು.

ಗಾಂಧೀಜಿ ಭಾವಚಿತ್ರ ಇಲ್ಲದಕ್ಕೆ ಗರಂ
ವೆೇದಿಕೆ ಮೇಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇಲ್ಲದಿರುವುದನ್ನು ಗಮನಿಸಿದ ಶಾಸಕ ವೆಂಕಟರಡ್ಡಿ ಮುದ್ನಾಳ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆದರು. ಗಾಂಧೀಜಿ ಫೋಟೊ ಕಾರ್ಯಕ್ರಮದಲ್ಲಿ ಇರಿಸುವಂತೆ ಹಲವು ಬಾರಿ ತಿಳಿಸಲಾಗಿದೆ. ಆದರೂ ಅಧಿಕಾರಿಗಳು ಅಸಡ್ಡೆತನ ಮೆರೆಯುತ್ತಿದ್ದಾರೆ. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮ ನಡೆಸದಿದ್ದರೆ ಸಹಿಸಲು ಸಾಧ್ಯವಿಲ್ಲ. ಮುಂದೆ ಈ ರೀತಿ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net