

ಬೆಳಗಾವಿ: ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿ, ಪದವಿ ಆಂತರಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಖಾಸಗಿ ಪದವಿ ಕಾಲೇಜು ಮತ್ತು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ವಿದ್ಯಾರ್ಥಿನಿಯರು ಪ್ರತಿಭಟಿಸಿದರು. ನಗರದ ಖಾಸಗಿ ಪದವಿ ಕಾಲೇಜು ಮಂಡಳಿತ ಅವರು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುತ್ತಿಲ್ಲ. ನಮಗೆ ಧರ್ಮ ಪಾಲನೆಯೊಂದಿಗೆ ಶಿಕ್ಷಣವೂ ಮುಖ್ಯ. ಹಲವು ವರ್ಷಗಳಿಂದ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುತ್ತಿದ್ದೇವೆ. ಆದರೆ, ಈಗ ಕಾಲೇಜಿನ ಆಡಳಿತ ಮಂಡಳಿಯವರು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಬಿಡುತ್ತಿಲ್ಲ. ಹಿಜಾಬ್ ನಮ್ಮ ಹಕ್ಕು. ಅದನ್ನು ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಕಾಲೇಜು ಆಡಳಿತ ಮಂಡಳಿ, ಪ್ರಾಂಶಪಾಲರು ಹಿಜಾಬ್ ನೆಪವೊಡ್ಡಿ ನಮಗೆ ತೊಂದರೆ ನೀಡುತ್ತಿರುವುದು ಸರಿ ಅಲ್ಲ. ಆಂತರಿಕ ಪರೀಕ್ಷೆ ಸೇರಿ ತರಗತಿಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡುತ್ತಿಲ್ಲ. ಈ ಕುರಿತು ಪಾಲಕರು ವಿನಂತಿಸಿದರೂ ಸ್ಪಂದಿಸುತ್ತಿಲ್ಲ. ಹಾಗಾಗಿ, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಲಾಗುವುದು ಎಂದು ವಿದ್ಯಾರ್ಥಿನಿಯರು ಎಚ್ಚರಿಸಿದರು.