ಹಿರಿಯ ನಾಗರಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ

Published on

ಚಾಮರಾಜನಗರ: ಹಿರಿಯ ನಾಗರಿಕರ ಆಶೀರ್ವಾದ ಮತ್ತು ಮಾರ್ಗದರ್ಶನ ಎಲ್ಲರಿಗೂ ಬಹುಮುಖ್ಯವಾಗಿದ್ದು, ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕ್ಷೇತ್ರದಲ್ಲಿ ಭಾಗಿಯಾಗಿರುವ ಸ್ಥಳೀಯ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿರಾಗಾಂಧಿಯವರು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ 20 ಅಂಶಗಳ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಜಾರಿಗೆ ತಂದಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಿ. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಬಹಳ ಕಷ್ಟಪಟ್ಟು ಲಾಲನೆ ಪಾಲನೆ ಮಾಡಿ ಬೆಳೆಸಿರುತ್ತಾರೆ. ಅವರ ಋಣ ತೀರಿಸಲು ಎಂದಿಗೂ ಸಾಧ್ಯವಾಗುವುದಿಲ್ಲ. ಆಗಾಗಿ ಮಕ್ಕಳು ತಮ್ಮ ತಂದೆ-ತಾಯಿಯ ಮುಪ್ಪಿನ ಸಮಯದಲ್ಲಿ ಅವರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಹಿರಿಯ ನಾಗರಿಕರನ್ನು ಕೊನೆಯ ಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಹಿರಿಯ ನಾಗರಿಕರು ಸಕಾಲದಲ್ಲಿ ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಗುರುತಿನ ಚೀಟಿಯನ್ನು ಪಡೆಯಬೇಕು. ಅಂಗವಿಕಲರಿಗೆ ಬಸ್, ರೈಲಿನಲ್ಲಿ ಹಾಗೂ ವಿಮಾನದಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮಾಡಲು ಎಲ್ಲಾ ರೀತಿಯ ಅನುಕೂಲವನ್ನು ಸರ್ಕಾರ ಮಾಡಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ತಂದೆ ತಾಯಿಯ ಸೇವೆಯನ್ನು ಮಾಡುವ ಜನರು ಸಿಗುತ್ತಾರೆ, ಆದರೆ ನಗರ ಪ್ರದೇಶದಲ್ಲಿ ಹಿರಿಯರನ್ನು ವೃದ್ಧಾಶ್ರಮಕ್ಕೆ ಬಿಡುವ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಕೆಲವರಿಗೆ ಹಿರಿಯರ ಆಸ್ತಿ ಮತ್ತು ಸಂಪತ್ತು ಬೇಕು ಆದರೆ ಅವರ ಸೇವೆ ಮಾಡದೇ ಆಶ್ರಮಕ್ಕೆ ಬಿಡುತ್ತಾರೆ. ಹಿರಿಯರನ್ನು ಗೌರವಿಸಿ ಅವರ ಮಾರ್ಗದರ್ಶದಲ್ಲಿ ಬೆಳೆದರೆ ಜೀವನ ಉತ್ತಮವಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ರಮೇಶ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ.ಕೆ.ಎನ್.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಚ್.ಆರ್.ಸುರೇಶ್ ಇತರರು ಉಪಸ್ಥಿತರಿದ್ದರು.

ಬಹುಮಾನ ವಿತರಣೆ:

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಹಿರಿಯ ನಾಗರಿಕರಾದ ಚಾಮರಾಜನಗರ ತಾಲೂಕಿನ ಮಸಗಾಪುರ ಗ್ರಾಮದ ನಿವಾಸಿ ದೀನಮಣಿ ಹಾಗೂ ಕಿಲಗೆರೆ ಗ್ರಾಮದ ಚೌಡಯ್ಯ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net