ಹಿರಿಯೂರು, ಚಳ್ಳಕೆರೆ ಬರಪೀಡಿತವೆಂದು ಘೋಷಿಸಿ

D.sudhakar MLA--04
Published on

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮುರು, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ತಾಲೂಕುಗಳ ಜತೆ ಹಿರಿಯೂರು ಮತ್ತು ಚಳ್ಳಕೆರೆಯನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ.

ಜಿಲ್ಲೆಯೂ ಡಾ.ನಂಜುಂಡಪ್ಪ ವರದಿಯನ್ವಯ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದ್ದು, ಅತಿ ಹೆಚ್ಚು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಮಳೆ ಆಧಾರಿತ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ, ಪ್ರಸ್ತುತ ಹಿರಿಯೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆ ಬಿತ್ತನೆ ವಿಸ್ತೀರ್ಣ 35,205 ಹೆಕ್ಟೇರ್ ಪ್ರದೇಶವಿದ್ದು, ಅದರಲ್ಲಿ ಈಗಾಗಲೇ 32,341 ಹೆಕ್ಟೇರ್‌ನೊಂದಿಗೆ ಶೇ 92ರಷ್ಟು ಬಿತ್ತನೆಯಾಗಿದೆ. ಆದರೆ, ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಎಂದು ಉಲ್ಲೇಖಿಸಿದ್ದಾರೆ.

ಆಗಸ್ಟ್‌ನಲ್ಲಿ ವಾಡಿಕೆ ಮಳೆ 59 ಮಿ.ಮೀ.ಗೆ ಬದಲಾಗಿ ವಾಸ್ತವಿಕವಾಗಿ ಕೇವಲ 8.6 ಮಿ.ಮೀ ಮಾತ್ರ ಮಳೆಯಾಗಿದೆ. ಸತತ 4 ವಾರ ಬಿಸಿಲಿನಿಂದ ಬೆಳೆಗಳು ಒಣಗುತ್ತಿವೆ. ಜು. 28ರಿಂದ ಆ. 30ರೊಳಗೆ ಬಿತ್ತನೆಯಾಗಿರುವ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ, ತೊಗರಿ, ಹತ್ತಿ, ಸಿರಿಧಾನ್ಯ ಬೆಳೆಗಳಲ್ಲಿ ಶೇ 50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇಳುವರಿ ನಷ್ಟವನ್ನು ರೈತರು ಅನುಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಮುಂದಿನ ದಿನಗಳಲ್ಲಿ ಮಳೆ ಬಂದರೂ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇಲ್ಲವೆಂದು ಕೃಷಿ ಇಲಾಖೆ ಅಧಿಕಾರಿಗಳು ವರದಿ ನೀಡಿದ್ದಾರೆ. ವಿಶೇಷವಾಗಿ ಮೆಕ್ಕೆಜೋಳ, ರಾಗಿ, ಶೇಂಗಾ, ಹತ್ತಿ ಬೆಳೆದ ರೈತರು ಫಸಲು ಬರುವ ವೇಳೆ ಮಳೆ ಇಲ್ಲದೆ ಕಂಗಾಲಾಗಿದ್ದಾರೆ. ಬೆಳೆದ ಫಸಲನ್ನು ಯಥಾಸ್ಥಿತಿ ನಾಶಗೊಳಿಸಲು ನಿರ್ಧಾರ ಮಾಡಿದ್ದಾರೆ. ನಿತ್ಯ ಜೀವನ ನಿರ್ವಹಣೆಗೆ ಅತ್ಯಗತ್ಯವಾಗಿರುವ ಫಸಲು ಕೈಗೆ ಬಾರದೆಯೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದ್ದು, ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದು ಪತ್ರ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net