

ಹುಬ್ಬಳ್ಳಿ: ಪರಿಶಿಷ್ಟರ ಮೀಸಲಾತಿ ಪ್ರಮಾಣ ಏರಿಕೆ ಮಾಡಿದ ಹಾಗೂ ಒಳ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ಏ. 6ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ನೆಹರು ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಸಂಪುಟ ಸಚಿವರು ಪಾಲ್ಗೊಳ್ಳುವರು. ಸುಮಾರು 1 ಲಕ್ಷ ಪರಿಶಿಷ್ಟರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಪರಿಶಿಷ್ಟರಲ್ಲಿ ಒಳ ಮೀಸಲಾತಿಗಾಗಿ ಕಳೆದ 30 ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಮುಖ್ಯಮಂತ್ರಿಯವರು ಪರಿಶಿಷ್ಟರ ಮೀಸಲು ಪ್ರಮಾಣವನ್ನಉ ಹೆಚ್ಚಳ ಮಾಡಿರುವುದಲ್ಲದೇ ಒಳ ಮೀಸಲಾತಿ ಜಾರಿ ಮಾಡಿದ್ದಾರೆ. ಇದು ಐತಿಹಾಸಿಕ ನಿರ್ಣಯ. ರಾಜ್ಯದಲ್ಲಿ ಪರಿಶಿಷ್ಟರ ಮೀಸಲು ಪ್ರಮಾಣ ಹೆಚ್ಚಿಸಿರುವುದನ್ನು 9ನೇ ಶೆಡ್ಯೂಲ್ನಲ್ಲಿ ಸೇರಿಸಲು ಹಾಗೂ ಒಳ ಮೀಸಲಾತಿ ಘೊಷಿಸಿರುವ ವಿಷಯವನ್ನು ಆರ್ಟಿಕಲ್ 341 (2) ನಡಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.