

ಹಾಸನ: ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟಲು ಜಿಲ್ಲಾದ್ಯಂತ ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಿಸಿ ಮತ್ತು ಪಿಎನ್‌ಡಿಟಿ ಮೇಲ್ವಿಚಾರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯಡಿಯಲ್ಲಿ ಸ್ಕ್ಯಾನಿಂಗ್ ಸೆಂಟರ್ ನೋಂದಣಿ ನವೀಕರಣ ಹಾಗೂ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸದರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅನುಮತಿ ನೀಡಲು ಜಿಲ್ಲಾಧಿಕಾರಿ ತಿಳಿಸಿದರು. ಹಾಗೂ ಈ ಕಾಯ್ದೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಆಕಾಶವಾಣಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಲು ದಿನಾಂಕ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಮಾತನಾಡಿ, ಈ ಕಾಯ್ದೆ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರಿಗೆ ಸಭೆ ನಡೆಸಿ ಕೆಲವೊಂದು ಮಾರ್ಗದರ್ಶ ನೀಡಲಾಗಿದೆ ಎಂದು ತಿಳಿಸಿದರು.
ಸಮಿತಿಯ ಸದಸ್ಯರಾದ ಡಾ.ಸಾವಿತ್ರಿ ಅವರು ಮಾತನಾಡಿ, ಗರ್ಭಪಾತ ಮಾಡಿಸಿಕೊಳ್ಳುವವರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು.
ಹಿಮ್ಸ್ ವೈದ್ಯಕೀಯ ಅಧಿಕ್ಷಕರಾದ ಡಾ.ಕೃಷ್ಣಮೂರ್ತಿ, ಆರ್‌ಸಿಎಚ್ ಅಧಿಕಾರಿ ಡಾ.ಚೇತನ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹರೀಶ್, ಸಮಿತಿ ಸದಸ್ಯರಾದ ಕೆ.ಟಿ.ಜಯಶ್ರಿ, ಶಬ್ಬಿರ್ ಅಹಮದ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.