ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ

10-pnp 2 meeting
Published on

ಪಾಂಡವಪುರ: ತಾಲೂಕಿನಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಘಟನೆ ನಡೆಯುತ್ತಿರುವ ಬಗ್ಗೆ ಅನುಮಾನಗಳಿದ್ದು, ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಇಂತಹ ಕಳಂಕ ತೊಳೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಇಲಾಖಾವಾರು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪಟ್ಟಣದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಜತೆಗೆ ಆಶಾ ಕಾರ್ಯಕರ್ತೆಯರ ಮೂಲಕ ಪ್ರತಿ ಗ್ರಾಮದಲ್ಲಿರುವ ಗರ್ಭಿಣಿಯರ ಮಾಹಿತಿ ಕಲೆಹಾಕಿ ಲೆಕ್ಕ ಪಡೆದುಕೊಳ್ಳಬೇಕು. ಗರ್ಭಿಣಿಯರ ಸಂಖ್ಯೆಯಲ್ಲಿ ವ್ಯತ್ಯಾಸವಾಗುತ್ತಿದ್ದೀಯಾ ಎಂಬುದನ್ನು ಪತ್ತೆಹಚ್ಚುವ ಮೂಲಕ ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಕ್ಕೆ ಕಡಿವಾಣ ಹಾಕಬೇಕು. ಮುಂದಿನ ಒಂದು ವಾರದಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭ್ರೂಣ ಹತ್ಯೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮುಂದಾಗಬೇಕು. ಪಾಲಕರು ಯಾವ ಕಾರಣಕ್ಕಾಗಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಎಂಬ ವಿಚಾರವನ್ನು ಪಟ್ಟಿ ಮಾಡುವುದರ ಜತಗೆ ಪ್ರಮುಖ ಸ್ಥಳಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಸಿಗುತ್ತಿರುವ ಗುಣಮಟ್ಟದ ಶಿಕ್ಷಣದ ಬಗ್ಗೆ ಪ್ರಚಾರ ನಾಮಫಲಕ ಅಳವಡಿಸಬೇಕು. ದಾಖಲಾತಿ ಹೆಚ್ಚಿಸಲು ಗ್ರಾಪಂಗೆ ಒಂದರಂತೆ ತಾಪಂ ಅನುದಾನದಲ್ಲಿ ಶಾಲಾ ಬಸ್ ವ್ಯವಸ್ಥೆ ಮಾಡಲಾಗುವುದು. ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಬಿಇಒ ರವಿಕುಮಾರ್ ಮಾತನಾಡಿ, ಯಾವ್ಯಾವ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಮತ್ತು ಶಿಕ್ಷಕರ ಕೊರತೆ ಇರುವ ಶಾಲೆಗಳನ್ನು ತಾಲೂಕು ಶಿಕ್ಷಣ ಸಂಯೋಜನೆ ಸಮಿತಿ ಮೂಲಕ ಸಂಯೋಜನೆಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಎರಡು ಮೂರು ಶಾಲೆಗಳ ಸಂಯೋಜನೆವಾದರೆ ಶಿಕ್ಷಕರ ಕೊರತೆ ತಕ್ಕಮಟ್ಟಿಗೆ ನೀಗುತ್ತದೆ. ಜತೆಗೆ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಿದ್ದರೆ ಸರ್ಕಾರಿ ಶಾಲೆಗಳನ್ನು ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚುತ್ತದೆ ಎಂದು ವಿವರಿಸಿದರು.

ತಿಂಗಳ ಅಂತ್ಯದೊಳಗೆ ಪಟ್ಟಣವನ್ನು ಸಂಪೂರ್ಣ ಸರ್ವೇ ಮಾಡಿಸಿ ಸರ್ಕಾರಿ ಜಾಗಗಳನ್ನು ಗುರುತಿಸಿ ನಾಮಫಲಕ ಅಳವಡಿಸುವ ಕೆಲಸವನ್ನು ಪುರಸಭೆ ಅಧಿಕಾರಿಗಳು ಮಾಡಬೇಕು. ಜಾಗಕ್ಕೆ ಸಂಬಂಧಿಸಿದಂತೆ ಕೇವಲ ಇಲಾಖೆಗಳ ನಡುವೆ ಪತ್ರ ವ್ಯವಹಾರ ಮಾಡಿ ಸುಮ್ಮನಾಗುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪಟ್ಟಣದಲ್ಲಿ ವಿವಿಧ ಸರ್ಕಾರಿ ಇಲಾಖೆಗಳಿಗೆ ಸೇರಿರುವ ಜಾಗಗಳು ಇದ್ದು, ಅವುಗಳ ಬಗ್ಗೆ ಇಲಾಖೆಗಳ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಯಾವ್ಯಾವ ಇಲಾಖೆಗೆ ಪಟ್ಟಣ ವ್ಯಾಪ್ತಿಯಲ್ಲಿ ಜಾಗ ಇದೆಯೋ ಅದನ್ನು ಗುರುತಿಸಿ ದಾಖಲಾತಿ ಸಿದ್ಧಪಡಿಸಿಕೊಳ್ಳಬೇಕು. ಈಗಾಗಲೇ ಪಟ್ಟಣದಲ್ಲಿ ಸರ್ಕಾರಿ ಜಾಗಗಳ ಅತಿಕ್ರಮೇಣ ಮತ್ತು ಒತ್ತುವರಿಯಾಗಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಹೀಗಾಗಿ ಅಧಿಕಾರಿಗಳು ಜಾಗೃತರಾಗಿ ಸರ್ಕಾರಿ ಜಾಗ ಉಳಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ತಾಪಂ ಆಡಳಿತಾಧಿಕಾರಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಅಶೋಕ್, ತಾಪಂ ಇಒ ಲೋಕೇಶ್ ಮೂರ್ತಿ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಹೊನಗಾನಹಳ್ಳಿ ಕೃಷ್ಣೇಗೌಡ, ತಾಲೂಕು ಯೋಜನಾಧಿಕಾರಿ ಆಶಾರಾಜ್, ತಾಪಂ ಸಹಾಯಕ ನಿರ್ದೇಶಕ ಎಸ್.ಸಿ.ಸುರೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net