ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಬಲಿಷ್ಠವಾದರೆ ಸಮಾಜ ಬಲಿಷ್ಠವಾಗಲು ಸಾಧ್ಯ

ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಬಲಿಷ್ಠವಾದರೆ ಸಮಾಜ ಬಲಿಷ್ಠವಾಗಲು ಸಾಧ್ಯ
Published on

ಹಾಸನ: ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಬಲಿಷ್ಠವಾದರೆ ಮಾತ್ರ ಸಮಾಜ ಬಲಿಷ್ಠವಾಗಲು ಸಾಧ್ಯ ಎಂದು ಬಾಲಕಿಯರ ಪದವಿ ಪೂರ್ವ ಕಾಲೇಜು (ವಿಭಜಿತ) ಪ್ರಾಂಶುಪಾಲ ಎ. ಗಣಪತಿ ಅಭಿಪ್ರಾಯಪಟ್ಟರು.

ನಗರದ ಆರ್.ಸಿ. ರಸ್ತೆಯ ಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಗುರುವಾರ ನಡೆದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ ತಮ್ಮ ಶಿಕ್ಷಣವನ್ನು ಸಂಪೂರ್ಣ ಮಾಡಬೇಕು. ಪಠ್ಯದ ಶಿಕ್ಷಣದೊಂದಿಗೆ ಜಗತ್ತಿನಲ್ಲಿ ನಡೆಯುವ ವಿದ್ಯಮಾನಗಳನ್ನು ತಿಳಿಯುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ಹೆಣ್ಣು ಮಕ್ಕಳಿಗೆ ಶೈಕ್ಷಣಿಕವಾಗಿ ಹಲವು ಅವಕಾಶಗಳು ಇದ್ದು, ಅದನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ವ್ಯಕ್ತಿಗಳಾಗಬೇಕು. ಹೆಣ್ಣು ದುರ್ಬಲರಾಗಬಾರದು, ಉತ್ತಮ ಶಿಕ್ಷಣ ಪಡೆಯುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು. ಇತ್ತೀಚಿನ ದಿನಗಳಲ್ಲಿ ವಾಣಿಜ್ಯಶಾಸ್ತ್ರ ವಿಷಯಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಪಿ.ಯು. ಹಾಗೂ ಪದವಿ ಹಂತದಲ್ಲಿ ಈ ವಿಷಯಕ್ಕೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ವಾಣಿಜ್ಯಶಾಸ್ತ್ರ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಹೆಚ್ಚು ಕ್ರೀಯಾತ್ಮಕವಾಗಿ ಇರಬೇಕು, ಕೇವಲ ಪಠ್ಯದ ವಿಷಯಕ್ಕೆ ಅಂಟಿಕೊಂಡರೆ ಸಾಲದು. ನಮ್ಮ ದೇಶದ ಅರ್ಥ ವ್ಯವಸ್ಥೆ ಹಾಗೂ ನಮ್ಮ ಸುತ್ತಮುತ್ತಲಿನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಹೇಮಾವತಿ ಮಾತನಾಡಿ, ಎಲ್ಲಾ ಪೋಷಕರು ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉತ್ತಮ ವ್ಯಕ್ತಿಗಳಾಗಬೇಕು ಎಂದು ಬಯಸುತ್ತಾರೆ. ಪೋಷಕರ ಆಸೆಯಂತೆ ಯುವಕ-ಯುವತಿಯರು ವಿದ್ಯಾಭ್ಯಾಸದ ಅವಧಿಯಲ್ಲಿ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಯಬೇಕು. ವಿದ್ಯಾಭ್ಯಾಸದ ಅವಧಿಯಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು, ಇತ್ತೀಚೆಗೆ ಮೊಬೈಲ್‌ನ ಅತೀಯಾದ ಬಳಕೆಯಿಂದ ಯುವ ಸಮುದಾಯ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಾಣಿಜ್ಯ ವಿದ್ಯಾರ್ಥಿಗಳು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ತಮಗೆ ದೊರೆತ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ. ನಂದನ್, ಐ.ಕ್ಯೂ.ಎ.ಸಿ ಸಂಚಾಲಕ ಜಿ.ಆರ್. ಮೋಹನ್ ಕುಮಾರ್, ಅಧ್ಯಾಪಕರಾದ ಡಿ.ಜೆ. ರಮ್ಯ, ಎಸ್.ಜಿ. ರೇಖಾ, ಉಪನ್ಯಾಸಕರಾದ ಎಚ್.ಎಸ್. ಸುಧರಾಣಿ, ಸಿ.ಎಸ್. ಸೌಮ್ಯ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net