

ಚಾಮರಾಜನಗರ: ವಿಧ್ಯೆಭ್ಯಾಸದ ಸಂದರ್ಭದಲ್ಲಿ ಹೆಣ್ಣು ಮ್ಕಕಳು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನೇತ್ರ ತಜ್ಞೆ ಡಾ.ಎಸ್.ಪಿ.ಪೂರ್ಣಿಮಾ ಸಲಹೆ ನೀಡಿದರು.
ನಗರದ ಪಾಲಿಟೆಕ್ನಿಕ್ ಕಾಲೇಜಿನ ಸಮೀಪದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವರ್ಗಿಕೃತ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ, ಆಸರೆ ಚಾರಿಟೆಬಲ್ ಟ್ರಸ್ಟ್ ಹಾಗೂ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಆರೋಗ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸಮಾದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ಸಮಾಜದಲ್ಲಿ ಇತರರಿಗೆ ಮಾದರಿಯಾಗಬೇಕು. ವಿದ್ಯಾರ್ಥಿಗಳು ಅಗತ್ಯಕ್ಕೆ ತಕ್ಕಷ್ಟು ಮೊಬೈಲ್ ಬಳಕೆ ಮಾಡಬೇಕೆ ವಿನಃ, ಅತಿಯಾಗಿ ಮೊಬೈಲ್ ಬಳಕೆ ಮಾಡಬಾರದು. ಓದಿನ ಸಮಯದಲ್ಲಿ ವಿದ್ಯಾರ್ಥಿನಿಯರು ಬೇರೆ ಯಾವುದೇ ಆಮಿಷಕ್ಕೆ ಒಳಗಾಗದೆ, ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆ ಯೋಚನೆ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರಿಗೂ ಕಣ್ಣಿನ ಆರೋಗ್ಯ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿವರ್ಷ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ಕೆಲವರಲ್ಲಿ ಹತ್ತಿರದ ದೃಷ್ಟಿದೋಷ, ದೂರ ದೃಷ್ಟಿದೋಷ, ಕಣ್ಣಿನ ಪೊರೆ, ಕಣ್ಣು ನೋವು ಕಾಣಿಸಿಕೊಳ್ಳುತ್ತದೆ. ಅಂತವರು ತಕ್ಷಣವೇ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಎಂದರು.
ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಮಾತನಾಡಿ, ಹೆಣ್ಣು ಗಂಡಿಗೆ ಸರಿಸಮಾನಾಗಿ ಎಲ್ಲ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಹೆಣ್ಣು ಮಕ್ಕಳ ಮೇಲೆ ಇಂದಿಗೂ ಅನೇಕ ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಿವೆ. ಹೆಣ್ಣು ಮಕ್ಕಳ ರಕ್ಷಣೆಗಾಗಿ ಅನೇಕ ಕಾನೂನುಗಳು ಜಾರಿಯಲ್ಲಿದ್ದು, ಅವುಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು, ನಿಲಯ ಪಾಲಕರಾದ ಸರಸ್ವತಿ, ವಿದ್ಯಾರ್ಥಿಗಳಾದ ತೇಜು, ಕಾವ್ಯಶ್ರೀ, ಸೌಜನ್ಯ, ತನುಶ್ರೀ, ಅರ್ಪಿತಾ, ಪೂಜಾ, ಚೈತ್ರ, ಸ್ಪಂದನ, ವೈಷ್ಣವಿ ಹಾಗೂ ಇತರರು ಹಾಜರಿದ್ದರು.