

ಮಾಂಜರಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಗೋಟೂರಿನಿಂದ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದವರೆಗಿನ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗೆ ಕೇಂದ್ರ ಸರ್ಕಾರದಿಂದ ನೀಡಿರುವ ಅನುದಾನದಲ್ಲಿ ಬೇಗ ಕಾಮಗಾರಿ ಪ್ರಾರಂಭಿಸಬೇಕು. ಚಿಕ್ಕೋಡಿ ತಾಲೂಕಿನ ಮಾಂಜರಿಯ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯವರೆಗೆ ರಸ್ತೆ ಎತ್ತರ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಕೆಎಲ್ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಶನಿವಾರ ಮನವಿ ಮಾಡಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಡಾ.ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಕಾರ್ಯಾಲಯಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭ ಜೋಶಿ ಅವರಿಗೆ ಮನವಿ ಮಾಡಲಾಯಿತು. ಗೋಟೂರದಿಂದ ಜೇವರ್ಗಿ ರಾಜ್ಯ ಹೆದ್ದಾರಿ 548ರ ಮಾರ್ಗ ಮಧ್ಯೆ ಬರುವ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದವರೆಗಿನ 90 ಕಿಮೀ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 1,500 ಕೋಟಿ ರೂ.ಅನುದಾನ ಮಂಜೂರು ಮಾಡಿದೆ. ಆದರೆ, ರಸ್ತೆ ಕಾಮಗಾರಿ ಇನ್ನೂ ಪ್ರಾರಂಭವಾಗಿಲ್ಲ. ನೀಲನಕ್ಷೆ ತಯಾರಿಸಲಾಗಿದ್ದು, ಬೇಗ ಕಾಮಗಾರಿ ಪ್ರಾರಂಭಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಿಂದ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯವರೆಗೆ ರಸ್ತೆ ಎತ್ತರ ಹೆಚ್ಚಿಸಲು ಕೇಂದ್ರ ಸರ್ಕಾರವು ಹೆಚ್ಚಿನ ಅನುದಾನ ನೀಡಬೇಕು. ಅದಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ತಾವು ಮನವರಿಕೆ ಮಾಡಿ ಬೇಗ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕ ದುರ್ಯೋಧನ ಐಹೊಳೆ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಭರತೇಶ ಬನವಣೆ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕೋರೆ, ನಿರ್ದೇಶಕರಾದ ಅಜಿತರಾವ್ ದೇಸಾಯಿ ಮಲ್ಲಪ್ಪ ಮೈಶಾಳೆ, ಅಂಕಲಿ ಗ್ರಾಪಂ ಸದಸ್ಯರಾದ ಸುರೇಶ ಪಾಟೀಲ, ತುಕಾರಾಮ ಪಟೇಲ್, ವಿವೇಕ ಕಮತೆ, ಡಾ.ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ನಿರ್ದೇಶಕರಾದ ಅಣ್ಣಾಸಾಹೇಬ ಸಂಕೇಶ್ವರಿ, ಪಿಂಟು ಹಿರೇಕುರುಬರ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಅಜಿತ ಉಮಾರಾಣಿ, ದೇವೇಂದ್ರ ಕರೋಶಿ ಇತರರು ಇದ್ದರು.