ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ

IMG-20230628-WA0106
ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಪಾಂಡವಪುರ ತಾಲೂಕಿನ ಟಿ.ಎಸ್.ಛತ್ರದ ಬಳಿ ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
Published on

ಪಾಂಡವಪುರ: ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಶಾಲಾ-ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿ ಬಸ್ ಸಂಚಾರ ತಡೆದು ಬುಧವಾರ ಪ್ರತಿಭಟನೆ ನಡೆಸಿದರು.


ತಾಲೂಕಿನ ಟಿ.ಎಸ್.ಛತ್ರದ ಮುಖ್ಯರಸ್ತೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಗಂಟೆಗಟ್ಟಲೇ ಕಾದರೂ ಬಸ್ ಬಾರದಿದ್ದರಿಂದ ಬೇಸತ್ತ 50 ವಿದ್ಯಾರ್ಥಿಗಳು ದಿಢೀರ್ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದರು.


ಟಿ.ಎಸ್.ಛತ್ರ ಮಾರ್ಗವಾಗಿ ಬರುವ ಅನೇಕ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಪಾಂಡವಪುರ, ಮೈಸೂರು ಸೇರಿದಂತೆ ಇತರ ಕಡೆಗೆ ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದು, ಬೆಳಗಿನ ವೇಳೆ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲವಾಗಿದೆ. ಇದರಿಂದ ಶಾಲಾ- ಕಾಲೇಜುಗಳಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.


ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಮೇಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬೆಳಗಿನ ವೇಳೆ ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಸಾಧ್ಯವಾಗದಷ್ಟು ಪ್ರಯಾಣಿಕರಿಂದ ತುಂಬಿರುತ್ತದೆ. ಹೀಗಾಗಿ ಬಸ್‌ನ ಸಂಖ್ಯೆ ಹೆಚ್ಚಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಗ್ರಾಮದ ಕೆಲ ಮುಖಂಡರು ಸಂಬಂಧಪಟ್ಟ ಅಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಸ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net