ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ

SRP_19-01(1)jpj
Published on

ಶ್ರೀರಂಗಪಟ್ಟಣ : ಕೃಷ್ಣರಾಜ ಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ ಬೆಳೆಗಳನ್ನು ಉಳಿಸುವಂತೆ ರಾಜ್ಯ ರೈತ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟಿಸಲಾಯಿತು.
ಪಟ್ಟಣದ ಕುವೆಂಪು ವೃತ್ತದಲ್ಲಿ ಬುಧವಾರ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ಜಮಾವಣೆಗೊಂಡ ಶ್ರೀರಂಗಪಟ್ಟಣ ಮತ್ತು ಪಾಂಡವಪುರ ತಾಲೂಕಿನ ನೂರಾರು ರೈತರು ರಾಜ್ಯ ಸರ್ಕಾರ ಹಾಗೂ ನೀರಾವರಿ ಇಲಾಖೆ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಮಾತನಾಡಿ, ಕೃಷಿ, ಕಂದಾಯ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸರ್ವೆ ನಡೆಸಿ ಸರ್ಕಾರಕ್ಕೆ ನೀರಿನ ಅಗತ್ಯದ ಬಗ್ಗೆ ವರದಿ ನೀಡಬೇಕಿತ್ತು. ಮಳೆ ಇಲ್ಲದೆ ಒಣಗುತ್ತಿರುವ ಬೆಳೆ ಬಗ್ಗೆ ಸಾಕಷ್ಟು ಬಾರಿ ರೈತರು ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಈ ವರೆಗೆ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಪ್ರಸ್ತುತ ಜಿಲ್ಲೆಯಲ್ಲಿ 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆ ಇದೆ. ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ ತೋಟಕ್ಕೂ ನೀರಿಲ್ಲದೆ ಒಣಗುತ್ತಿವೆ. ಹಾಗಾಗಿ ಕೃಷ್ಣರಾಜ ಸಾಗರ ಜಲಾಶಯದಿಂದ 1 ಕಟ್ಟಿನ ನೀರನ್ನು ಹರಿಸಿ ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳನ್ನು ಉಳಿಸಬೇಕು ಎಂದರು.
ರೈತ ಸಂಘದ ತಾಲೂಕು ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ ಮಾತನಾಡಿ ಪ್ರಸ್ತುತ ಜಲಾಶಯದಲ್ಲಿ 89 ಅಡಿ ನೀರಿದೆ. ಇನ್ನೆರಡು ದಿನಗಳಲ್ಲಿ ವಿಶ್ವೇಶ್ವರಯ್ಯ ನಾಲೆ, ಸಿಡಿಎಸ್, ವಿರಿಜಾ ಸೇರಿದಂತೆ ವಿವಿಧ ನಾಲೆಗಳಿಗೆ ನೀರು ಹರಿಸಿ ಬೆಳೆ ಉಳಿಸಬೇಕು. ಇಲ್ಲದಿದ್ದರೆ ರೈತಾಪಿ ಜನರೊಂದಿಗೆ ಹೆದ್ದಾರಿಯಲ್ಲಿ ಎತ್ತಿನ ಗಾಡಿ ಕಟ್ಟಿ ಪ್ರತಿಭಟನೆ ನಡೆಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net