ಹೊರರಾಜ್ಯದಿಂದ ಬಂದವರ ಮೇಲಿರಲಿ ನಿಗಾ

28-gdg-2
Published on

ಗದಗ: ಲಾಕ್​ಡೌನ್ ಸಡಿಲಿಕೆಯಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಹೊರರಾಜ್ಯಗಳಿಂದ ಬರುತ್ತಿರುವವರನ್ನು ತಪಾಸಿಸಿ ಸೋಂಕು ಹರಡದಂತೆ ನಿಗಾ ವಹಿಸಬೇಕು ಎಂದು ರಾಜ್ಯ ಸಮಗ್ರ ಶಿಕ್ಷಣ ಯೋಜನಾ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಟಿ. ರೇಜು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳ ಕುರಿತು ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಎಲ್ಲರನ್ನೂ ಕ್ವಾರಂಟೈನ್​ನಲ್ಲಿ ಇಡುವ ವ್ಯವಸ್ಥೆ ಮಾಡಬೇಕು. ಅವರ ಚಲನವಲನಗಳ ಬಗ್ಗೆ ನಿಗಾ ವಹಿಸಿ ರೋಗ ಹರಡುವುದನ್ನು ತಡೆಯಬೇಕು ಎಂದರು.

ಜಿಲ್ಲೆಗೆ ಆಗಮಿಸಲು ಸೇವಾ ಸಿಂಧು ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡಿರುವವರ ಕುರಿತು ಮಾಹಿತಿ ಪಡೆದರಲ್ಲದೆ, ಹೋಂ ಕ್ವಾರಂಟೈನ್​ನಲ್ಲಿ ಇರುವವರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಿರುವ ಕುರಿತು ನಿಗಾ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿಟ್ಟುಕೊಂಡು ಕೊರತೆ ಆಗದಂತೆ ಕೆಲಸ ಮಾಡಬೇಕು. ಅನ್ಯ ರಾಜ್ಯಗಳಿಂದ ಮರಳಿ ಜಿಲ್ಲೆಗೆ ಬಂದಿರುವ ಗ್ರಾಮೀಣ ವಲಸಿಗರಿಗೆ ನರೇಗಾ ಯೋಜನೆಯಡಿ ಉದ್ಯೋಗ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಕಂಟೇನ್ಮೆಂಟ್ ವಲಯಗಳಲ್ಲಿರುವ ಗರ್ಭಿಣಿಯರನ್ನು ಗುರುತಿಸಿ ಅವರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 35 ಕರೊನಾ ಪಾಸಿಟಿವ್ ವರದಿಯಾಗಿವೆ. ಇದರಲ್ಲಿ 6 ಜನರು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 28 ಸಕ್ರಿಯ ಪ್ರಕರಣಗಳಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ. ಅನ್ಯ ರಾಜ್ಯಗಳ 460 ವಲಸೆ ಕಾರ್ವಿುಕರ ಆರೋಗ್ಯ ತಪಾಸಣೆ ಮಾಡಿ ಅವರ ಸ್ವಂತ ರಾಜ್ಯಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಿಇಒ ಡಾ.ಆನಂದ ಕೆ., ಎಸ್ಪಿ ಯತೀಶ ಎನ್., ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಎಸಿ ರಾಯಪ್ಪ ಹುಣಸಗಿ ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net