More

    ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ

    ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಒತ್ತಾಯ ಎಲ್ಲೆಡೆ ಕೇಳಿ ಬರುತ್ತಿದ್ದು, ಮೈಸೂರಿನಲ್ಲೂ ಒಕ್ಕಲಿಗ ಮುಖಂಡರು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದರು.

    ಸೋಮವಾರ ಕುವೆಂಪುನಗರದ ಬಂದಂತಮ್ಮ ಕಾಳಮ್ಮ ದೇಗುಲದ ಆವರಣದಲ್ಲಿ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀಸೋಮನಾಥ ಸ್ವಾಮೀಜಿಯ ಸಮ್ಮುಖದಲ್ಲಿ ಸಭೆ ನಡೆಸಿದ ಒಕ್ಕಲಿಗ ಮುಖಂಡರು, ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು.

    ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ ಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಸಿಎಂ ಆಗಲಿದ್ದಾರೆ ಎಂದು ಒಕ್ಕಲಿಗ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಮತ ನೀಡಿದೆ. ಡಿಕೆಶಿಗೆ ಸಿಎಂ ಸ್ಥಾನ ನೀಡದಿದ್ದರೆ ಒಕ್ಕಲಿಗ ಸಮಾಜ ಕಾಂಗ್ರೆಸ್‌ನಿಂದ ದೂರ ಸರಿಯಲಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಸೋಮನಾಥ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಸೇವೆ ನೀಡಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಅವಿರತ ಶ್ರಮಿಸಿದ್ದಾರೆ. ಅವರು ಸಿಎಂ ಆಗುತ್ತಾರೆ ಎಂಬ ಕಾರಣಕ್ಕಾಗಿಯೇ ಒಕ್ಕಲಿಗರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇದರಿಂದಾಗಿ ಸಿಎಂ ಸ್ಥಾನವನ್ನು ಅವರಿಗೇ ನೀಡಬೇಕು. ಅವರು ಭವಿಷ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಾರೆ. ಜತೆಗೆ ಯುವಕರಿಗೆ ಒಳ್ಳೆಯ ಮಾರ್ಗದರ್ಶನ ನೀಡಲಿದ್ದಾರೆ ಎಂದರು.
    ಮುಖಂಡರಾದ ಪ್ರಶಾಂತ್‌ಗೌಡ ಸೇರಿದಂತೆ ಇತರರು ಭಾಗವಹಿಸಿದ್ದರು.

    ಡಿಕೆ ಶಿವಕುಮಾರ್ ಜನ್ಮದಿನ ಆಚರಣೆ

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 62ನೇ ವಸಂತಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಅಗ್ರಹಾರದ ವೃತ್ತದಲ್ಲಿ ಸಾರ್ವಜನಿಕರಿಗೆ ನಂದಿನಿ ಉತ್ಪನ್ನಗಳನ್ನು ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿದರು. ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಜು, ಡೈರಿ ವೆಂಕಟೇಶ್ ಇತರರಿದ್ದರು.

    ಮೈಸೂರಿನಲ್ಲಿ ಸೋಮವಾರ ಶ್ರೀಸೋಮನಾಥ ಸ್ವಾಮೀಜಿ ನೇತೃತ್ವದಲ್ಲಿ ಒಕ್ಕಲಿಗ ಮುಖಂಡರು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts