

ನವದೆಹಲಿ: ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದ್ದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ತಮಿಳುನಾಡಿನ ಆತಿಥ್ಯದಲ್ಲಿ ಜನವರಿ 19 ರಿಂದ 31ರ ವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಉದಯನಿಧಿ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ಭೇಟಿ ಬಳಿಕ ಮಾತನಾಡಿದ ಸಚಿವ ಉದಯನಿಧಿ, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಆದೇಶದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದ್ದೇನೆ. ಇದರ ಜೊತೆಗೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ತಮಿಳುನಾಡಿನ ಸಾರ್ವಜನಿಕ ಪ್ರಾಮುಖ್ಯತೆಯ ಬಗ್ಗೆ, ವಿಶೇಷವಾಗಿ ತಮಿಳುನಾಡಿನ ಕ್ರೀಡೆಗಳ ಬಹುಮುಖಿ ಅಭಿವೃದ್ಧಿಯ ಬಗ್ಗೆ ಪ್ರಧಾನಿಯವರೊಂದಿಗೆ ಚರ್ಚಿಸಲಾಗಿದೆ. ಸಭೆಯಲ್ಲಿ, ಸಿಎಂ ಟ್ರೋಫಿ ಗೇಮ್ಸ್ 2023 ಮತ್ತು ತಮಿಳುನಾಡು ಆಯೋಜಿಸಿದ್ದ ಏಷ್ಯನ್ ಪುರುಷರ ಹಾಕಿ ಚಾಂಪಿಯನ್ಶಿಪ್ನ ಯಶಸ್ವಿ ನಿರ್ವಹಣೆಯನ್ನು ಪ್ರದರ್ಶಿಸುವ ಕಾಫಿ ಟೇಬಲ್ ಪುಸ್ತಕವನ್ನು ಪ್ರಧಾನಿಗೆ ನೀಡಲಾಗಿದೆ ಎಂದು ಸಚಿವ ಉದಯನಿಧಿ ಸ್ಟಾಲಿನ್ ಮಾಹಿತಿ ನೀಡಿದ್ದಾರೆ.