

ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಗಡಿನಾಡಿನ ಕನ್ನಡಿಗರ ಭಾವನೆಗಳಿಗೆ ಸ್ಪಂದಿಸುವುದರ ಜತೆಗೆ ಕನ್ನಡ ಭಾಷೆ, ಕನ್ನಡ ಶಾಲೆಗಳ ಉಳಿವಿಗೆ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರಂತರ ಶ್ರಮ ವಹಿಸಲಿರುವುದಾಗಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ.
ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹ ಸಂಸ್ಥೆಗಳ ವತಿಯಿಂದ ನಿವೃತ್ತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ.ಎ.ಶ್ರೀನಾಥ್ ಕಾಸರಗೋಡು ಅವರಿಗೆ ಪ್ರತಿಷ್ಠಿತ ‘ಕಯ್ಯಾರ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಸಮಾರಂಭ ಉದ್ಘಾಟಿಸಿ, ಮೇರು ಸಾಹಿತಿಯ ಹೆಸರಿನ ಪ್ರಶಸ್ತಿಯೊಂದನ್ನು ಸೂಕ್ತ ವ್ಯಕ್ತಿತ್ವಕ್ಕೆ ನೀಡಿರುವುದು ಶ್ಲಾನೀಯ ಎಂದರು.
ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡಿದರು. ಕೊಂಕಣಿ ಗಾಯಕ ಜೋಸೆಫ್ ಮಾಥಿಯಾಸ್ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಬಹುಭಾಷಾ ಸಾಹಿತಿ ಮಹಮ್ಮದ್ ಬಡ್ಡೂರ್ ಸಂಸ್ಮರಣಾ ಭಾಷಣ ಮಾಡಿದರು. ಅಬ್ದುಲ್ ಅಜೀಜ್ ಬೈಕಂಪಾಡಿ ಅವರ ‘ಬ್ಯಾರಿ ಬಾಸೆ ಪಡಿಕೊರು’ ಪುಸ್ತಕದ ಬಿಡುಗಡೆ ನಡೆಯಿತು. ಪೈವಳಿಕೆ ಗ್ರಾಪಂ ಅಧ್ಯಕ್ಷ ಜಯಂತಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಸದಸ್ಯರಾದ ಶಿವರೆಡ್ಡಿ, ಎ.ಆರ್.ಸುಬ್ಬಯ್ಯಕಟ್ಟೆ, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯೆ ಫಾತಿಮತ್ ಜುಹರಾ, ಪೆರಡಾಲ ಕವಿತಾ ಕುಟೀರ ಅಧ್ಯಕ್ಷ ದುರ್ಗಾಪ್ರಸಾದ ರೈ, ಕಸಾಪ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ, ಮಂಜುನಾಥ ಆಳ್ವ ಮಡ್ವ, ಶ್ರೀಧರ ಹೊಳ್ಳ ಪೈವಳಿಕೆ, ಅಶ್ರಫ್ ಪಿ.ಪಿ ಮೊದಲಾದವರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ ಸ್ವಾಗತಿಸಿದರು. ಕನ್ನಡ ಮಾಧ್ಯಮ ಪತ್ರಕರ್ತರ ಸಂಘ ಅಧ್ಯಕ್ಷ ರವಿ ನಾಯ್ಕಾಪು ನಿರೂಪಿಸಿದರು. ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ವಂದಿಸಿದರು.
ವಿವಿಧ ಸಂಘ-ಸಂಸ್ಥೆಗಳ ಸಹಯೋಗ
ಕಾಸರಗೋಡು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ, ಮಂಗಳೂರು ಕಲ್ಕೂರ ಪ್ರತಿಷ್ಠಾನ, ಕಯ್ಯಾರ್ ಗ್ರೀನ್ ಸ್ಟಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, 16ನೇ ವಾರ್ಡು ಕಯ್ಯಾರು ಕುಟುಂಬಶ್ರೀ ಟಕಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.