

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಭಾರೀ ಸದ್ದು ಮಾಡುತ್ತಿದ್ದು, ರಾಜಕೀಯ ಮೇಲಾಟವೂ ಬಿರುಸುಗೊಂಡಿದೆ. ಹಾಗೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ- ಸಚಿವ ಸಿ.ಟಿ. ರವಿ ನಡುವೆ ಮಾತಿನ (ಮತ್ತಿನ ವಿಚಾರ) ತೇಲಾಟ ಜೋರಾಗಿದೆ.
ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಸೋಮವಾರ ಮಾತನಾಡಿದ್ದ ಎಚ್ಡಿಕೆ, 'ಡ್ರಗ್ಸ್ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನ ಆಯ್ತು' ಎಂದು ಆರೋಪಿಸಿದ್ದರು. ಈ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ ರವಿ, 'ಈ ರೀತಿಯಲ್ಲಿ ಕುಮಾರಸ್ವಾಮಿ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯ ಇದೆ. ಅವರು ಸಹಜ ಸ್ಥಿತಿಯಲ್ಲಿ ಹೇಳಿದ್ದಾರೋ ಅಥವಾ ಮತ್ತಿನಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೋ?' ಎಂದು ಲೇವಡಿ ಮಾಡಿದ್ದರು.
ಸಿ.ಟಿ. ರವಿ ಹೇಳಿಕೆಗೆ ಕೆಂಡಾಮಂಡಲವಾದ ಎಚ್ಡಿಕೆ, 'ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು' ಎಂದು ಟ್ವೀಟ್ ಮಾಡಿದ್ದಾರೆ. 'ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು' ಎಂದು ಟೀಕಿಸಿದ ಎಚ್ಡಿಕೆ, 'ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ' ಎಂದು ವಾರ್ನಿಂಗ್ ಕೊಟ್ಟಿದ್ದಾರೆ.