

ಬೆಂಗಳೂರು: ನಗರದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಕಾರಣ ಶನಿವಾರ (ಸೆ.25)ದಿಂದ ನಗರ ಸಂಚಾರ ಪೊಲೀಸರು ಮತ್ತೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.
ಶನಿವಾರ ಟ್ರಾಫಿಕ್ ಮ್ಯಾನೇಜ್ಮೆಂಟ್ ಕಂಟ್ರೋಲ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಂಚಾರ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರ ಸಂಚಾರ ವಿಭಾಗದಲ್ಲಿ 2020ರಿಂದ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಪ್ರಕರಣ ದಾಖಲು ಮಾಡುವಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.
ಇದನ್ನೂ ಓದಿ: ‘ವಿಜಯಾನಂದ’ ಚಿತ್ರದ ಆಡಿಷನ್ಸ್ಗೆ ಜಮಾಯಿಸಿದ ಕಲಾವಿದರು
ಆದರೆ, ನಗರದಲ್ಲಿ ಹೆಚ್ಚುತ್ತಿರುವ ಮಾರಣಾಂತಿಕ ಅಪಘಾತಗಳ ಕಾರಣಗಳನ್ನು ವಿಶ್ಲೇಷಿಸಿದಾಗ ಬಹಳಷ್ಟು ಅಪಘಾತಗಳಲ್ಲಿ ವಾಹನ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಹಿನ್ನೆಲೆಯಲ್ಲಿ ಅಪಘಾತಗಳು ಸಂಭವಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರುವುದು ಗೊತ್ತಾಗಿದೆ. ಹೆಚ್ಚುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ನಗರ ಸಂಚಾರ ವಿಭಾಗದಿಂದ ಶನಿವಾರದಿಂದ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಪ್ರಕ್ರಿಯೆಗೆ ಪುನಃ ಚಾಲನೆ ನೀಡಲಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.