ಪೊಲೀಸ್​ ಕಮಿಷನರ್​ಗೆ ತೀವ್ರ ಅನಾರೋಗ್ಯ; ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​

Labu ram
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್​ ಕಮಿಷನರ್​ ಲಭೂ ರಾಮ್​ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಅವರನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏರ್​ ಲಿಫ್ಟ್ ಮಾಡಲಾಗಿದೆ.

ಇತ್ತೀಚೆಗಷ್ಟೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಅವರು ಮಧ್ಯರಾತ್ರಿ ಸುಮಾರಿಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಗಂಟಲಿನ ಸೋಂಕಿನ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಅವರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಅದಾದ ಬಳಿಕ ಸತತ ಜ್ವರವಿತ್ತು.

ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಅನಾರೋಗ್ಯ ಪರಿಸ್ಥಿತಿ ಉಲ್ಬಣಿಸಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಯಿತು. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಕುಟುಂಬಸ್ಥರು ಅವರನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಪರಿಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚಿಂತಿಸುವಂಥದ್ದೇನಿಲ್ಲ ಎಂದು ಹುಬ್ಬಳ್ಳಿ ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net