More

    ರಕ್ತಹೀನತೆ ತಡೆಗಟ್ಟಲು ಪೌಷ್ಟಿಕ ಆಹಾರ ಸೇವಿಸಿ

    ಬಳ್ಳಾರಿ : ರಕ್ತಹೀನತೆ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಹಿನ್ನಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ಸೂಕ್ತ ಔಷಧೋಪಚಾರದೊಂದಿಗೆ ತರಕಾರಿ, ಪೌಷ್ಟಿಕ ಆಹಾರ ಸೇವಿಸುವಂತೆ ಜಾಗೃತಿ ನೀಡುವುದರ ಮೂಲಕ ರಕ್ತಹೀನತೆ ತಡೆಗಟ್ಟಲು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದರು.

    ಇಲ್ಲಿನ ಜಿಲ್ಲಾಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಕ್ತಹೀನತೆ ಮುಕ್ತ ಪೌಷ್ಟಿಕ ಆಹಾರ ಕುರಿತ ವೈದ್ಯಾದಿಕಾರಿಗಳಿಗೆ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಮಗು ಹುಟ್ಟಿನಿಂದ ತಕ್ಷಣ ಅರ್ಧಗಂಟೆಯೊಳಗೆ ತಾಯಿಯ ಎದೆಹಾಲು ಒದಗಿಸಲು ಹಾಗೂ ಮಗುವಿಗೆ ಆರು ತಿಂಗಳವರೆಗೆ ಕೇವಲ ತಾಯಿ ಎದೆಹಾಲನ್ನು ಮಾತ್ರ ನೀಡುವುದರ ಮಹತ್ವ ತಿಳಿಸಬೇಕು. ಹೆಸರು ಕಾಳು, ಹುರಳಿ ಕಾಳು ಸೇರಿದಂತೆ ಇತರ ಕಾಳುಗಳಿಂದ ಬೆರೆಸಿ ಸಿದ್ದಪಡಿಸಿ ದ್ರವರೂಪದಲ್ಲಿ ಪೂರಕ ಪೌಷ್ಟಿಕ ಆಹಾರವನ್ನು ನೀಡುವ ಮೂಲಕ ಮಗುವಿಗೆ ಸದೃಢ ಆರೋಗ್ಯಕ್ಕೆ ಸಹಕರಿಸುವಂತೆ ತಿಳಿಸಬೇಕು ಎಂದರು.

    ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗದಂತೆ ನೋಡಿಕೊಳ್ಳುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಬೀರುವ ಪರಿಣಾಮಗಳನ್ನು ಮೂಢನಂಬಿಕೆಗಳಿಂದ ಮಗುವಿಗೆ ಲಸಿಕೆ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಾಗೃತಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

    ಗರ್ಭಿಣಿಯರು ಮತ್ತು ಬಾಣಂತಿಯರು ಹೆಚ್ಚಾಗಿ ಹಸಿರು ತರಕಾರಿ ಪಲ್ಯ, ಕಾಳು ಹಾಗೂ ಸ್ಥಳೀಯವಾಗಿ ಋತುಮಾನದಲ್ಲಿ ದೊರಕುವ ಹಣ್ಣುಗಳನ್ನು ಸೇವಿಸುವಂತೆ ತಿಳಿಸಿಬೇಕು ಎಂದರು.

    ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ತರಬೇತುದಾರರಾದ ಡಾ.ವಿದ್ಯಾಶ್ರೀ, ಡಾ.ರೇವಣಸಿದ್ದಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ, ಡಾ.ಭರತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್.ದಾಸಪ್ಪನವರ ಸೇರಿದಂತೆ ವೈದ್ಯಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts