More

    ಹಿರಿಯರನ್ನು ಗೌರವದಿಂದ ಕಾಣಬೇಕು; ನ್ಯಾಯಾಧೀಶ ಪುಟ್ಟರಾಜು

    ಹಾವೇರಿ: ಪ್ರತಿ ಮನೆಯಲ್ಲಿ ಹಿರಿಯ ಮಾರ್ಗದರ್ಶನ ಎಲ್ಲ ಕಾಲಗಳಿಗೂ ಪ್ರಸ್ತುತವಾಗಿದೆ ಹಾಗೂ ಹಿರಿಯರನ್ನು ಗೌರವದಿಂದ ಕಾಣಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟರಾಜು ಹೇಳಿದರು.
    ನಗರದ ಗೆಳೆಯರ ಬಳಗ ಪ್ರಾಥಮಿಕ ಶಾಲೆ ಆವರಣದ ಲೋಡಾಯ ಸಭಾಭವನದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಹಿರಿಯರ ಅನುಭವ ಬಹಳ ದೊಡ್ಡದು, ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುತ್ತಿರುವುದು ವಿಷಾಧದ ಸಂಗತಿಯಾಗಿದೆ. ಹಿರಿಯರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ಒದಗಿಸುವತ್ತ ಗಮನ ನೀಡಬೇಕಿದೆ. ಮಕ್ಕಳ ಬದುಕು ಕಟ್ಟಿಕೊಡಲು ತಮ್ಮ ಜೀವನ ಸವೆಸಿದ ತಂದೆ-ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳಬೇಕು ಎಂದರು.
    ಜಿಲ್ಲೆಯಲ್ಲಿ 1,40,130 ಹಿರಿಯ ನಾಗರಿಕರಿದ್ದು, ಈ ಪೈಕಿ 40 ಸಾವಿರ ಹಿರಿಯ ನಾಗರಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗಿದೆ. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯಾವುದೇ ಮಧ್ಯವರ್ತಿಗಳ ಮೊರೆಹೋಗದೆ ನೇರವಾಗಿ ಸಂಬಂಧಿಸಿದ ಇಲಾಖೆಗಳಿಗೆ ತೆರಳಿ ಸೌಲಭ್ಯಗಳನ್ನು ಪಡೆಯಬೇಕು. ಕಾಲಮಿತಿಯೊಳಗೆ ಸೌಲಭ್ಯಗಳು ದೊರೆಯದಿದ್ದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಚೇರಿಗೆ ಮಾಹಿತಿ ನೀಡಿದಲ್ಲಿ , ಹಿರಿಯ ನಾಗಿಕರಿಗೆ ಸೌಲಭ್ಯ ಒದಗಿಸಲು ಸೂಕ್ತ ಕ್ರಮವಹಿಸಲಾಗುವುದು ಎಂದರು.
    ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಬಣಕಾರ ಮಾತನಾಡಿ, ಮೊಬೈಲ್ ಹಾಗೂ ಮಾಧ್ಯಮಗಳ ಹಾವಳಿಯಿಂದ ಹಿರಿಯರನ್ನು ಹಾಗೂ ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಹಿರಿಯರಿರುವ ಮನೆ ದೇವಸ್ಥಾನವಿದ್ದಂತೆ, ನಮ್ಮ ಸಂಸ್ಕೃತಿ, ಪರಂಪರೆಯನ್ನು ಪಾಲಿಸುವ ಮೂಲಕ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು ಎಂದರು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆದಲರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕ ಎನ್.ಎನ್. ದಿಳ್ಳೆಪ್ಪನವರ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರಾದ ಶಿವಬಸಯ್ಯ ವಿರಕ್ತಿಮಠ, ಜಯದೇವಪ್ಪ ಮಠದ, ಅಡಿವೆಪ್ಪ ಕುರಿಯವರ, ಜಯಶ್ರೀ ಶಿವಪೂರ ಹಾಗೂ ವಿದ್ಯಾವತಿ ನೆಲವಿಗಿ ಅವರನ್ನು ಸನ್ಮಾನಿಸಲಾಯಿತು. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಿರಿಯ ನಾಗರಿಕರ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.
    ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಈಶ್ವರ ನಂದಿ, ನಿವೃತ್ತಿ ಕೃಷಿ ಅಧಿಕಾರಿ ಹಾಗೂ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ಅಣ್ಣಿಗೇರಿ, ಮಲ್ಲಿಕಾರ್ಜುನ ಕೆಂಪಳ್ಳೇರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts