ಚುನಾವಣೆಗಳಲ್ಲಿ ಇವಿಎಂ ನಿಷೇಧಿಸಲು ಆಗ್ರಹ

ಬೆಳಗಾವಿ: ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಬಳಕೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಗುರುವಾರ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಸೇರಿ ಇನ್ನಿತರ ಸಾರ್ವತ್ರಿಕ ಚುನಾವಣೆಗಳಲ್ಲಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆ ಮಾಡಬೇಕು. ಜತೆಗೆ ಚುನಾವಣೆ ಆಯೋಗ ಸಹ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಜಗತ್ತಿನಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಚುನಾವಣೆಯಲ್ಲಿ ಅಕ್ರಮ ತಡೆಯಲು ಮತ್ತು ಇನ್ನಿತರ ಕಾರಣಗಳಿಂದಾಗಿ ಇವಿಎಂ ಯಂತ್ರಗಳ ಬಳಕೆಯನ್ನು ಸಂಪೂರ್ಣ ನಿಲ್ಲಿಸಿ ಬ್ಯಾಲೆಟ್ ಪೇಪರ್‌ಗಳನ್ನು ಬಳಕೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಬೇಕು ಎಂದು ಒತ್ತಾಯಿಸಿದರು.

2019 ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳು ಅಧಿಕ ಪ್ರಮಾಣದಲ್ಲಿ ಗೆದ್ದಿರುವುದು ನಾನಾ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಎವಿಎಂಗಳು ಮತ್ತು ಮತಖಾತ್ರಿ ಉಪಕರಣಗಳ (ವಿವಿ ಪ್ಯಾಟ್) ಕಾರ್ಯವೈಖರಿ ಸಂಬಂಧ ತನಿಖೆಯಾಗಬೇಕು ಎಂದು ಕೋರಿದರು.

ಆಮ್ ಆದ್ಮಿ ಪಕ್ಷದ ಜಿಲ್ಲಾ ಮುಖಂಡ ಸದಾನಂದ ಬಾಮನೆ, ಲಗಮಣ್ಣ ಬಸ್ತಿ, ಪ್ರಭು ನಾಯಕ, ಸುಜೀತ ಮುಳಗುಂದ ಸೇರಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *