ನೀತಿ ಉಲ್ಲಂಘನೆಗೆ ಸ್ವಯಂಪ್ರೇರಿತ ಕೇಸ್

<<ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವೆಚ್ಚ ವೀಕ್ಷಕ ಮಲ್ಲಿಕಾರ್ಜುನ ಉತ್ತರೆ ಸೂಚನೆ>>

ವಿಜಯವಾಣಿ ಸುದ್ದಿಜಾಲ ಉಡುಪಿ
ಕೇಂದ್ರ ಚುನಾವಣಾ ಆಯೋಗದಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಭಾರತೀಯ ಕಂದಾಯ ಸೇವೆ ಅಧಿಕಾರಿ ಮಲ್ಲಿಕಾರ್ಜುನ ಉತ್ತರೆ, ಬುಧವಾರ ಉಡುಪಿಗೆ ಆಗಮಿಸಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಬಳಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಅಥವಾ ಯಾವುದೇ ಅನಪೇಕ್ಷಿತ ಘಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರಿಗೆ ಕಾಯದೆ, ಚುನಾವಣಾ ಸಿಬ್ಬಂದಿ ತಮ್ಮ ಗಮನಕ್ಕೆ ಬಂದ ತಕ್ಷಣವೇ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ಕ್ರಮ ಕೈಗೊಳ್ಳಬೇಕು. ಚುನಾವಣಾ ಪ್ರಚಾರದಲ್ಲಿ ನಿಯಮ ಉಲ್ಲಂಘನೆ ಆಗದಂತೆ ನಿಗಾ ವಹಿಸಬೇಕು. ಪ್ರಮುಖವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಚಟುವಟಿಕೆಗಳು ನಡೆಯದಂತೆ ಗಮನಹರಿಸಬೇಕು ಎಂದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಎರಡು ಜಿಲ್ಲೆಗಳಲ್ಲಿ ಹರಡಿಕೊಂಡಿರುವುದರಿಂದ ಎರಡೂ ಜಿಲ್ಲೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಹಣ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮಾಹಿತಿಯನ್ನು ಪರಸ್ಪರರು ಹಂಚಿಕೊಂಡು ಅವುಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಕ್ಷೇತ್ರದ ಎಲ್ಲ 1,837 ಮತಗಟ್ಟೆಗಳಲ್ಲೂ ಮೂಲಸೌಕರ್ಯ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಚುನಾವಣಾ ತಹಸೀಲ್ದಾರ್ ಮುಹಮ್ಮದ್ ಇಸಾಕ್, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ಬಳಿಕ ವೆಚ್ಚ ವೀಕ್ಷಕರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಮೇಲ್ವಿಚಾರಣೆ ಸಮಿತಿ(ಎಂಸಿಎಂಸಿ) ಕೇಂದ್ರ, ಸಿ ವಿಜಿಲ್ ದೂರು ಕೋಶ, ಕಂಟ್ರೋಲ್ ರೂಂ ಮತ್ತಿತರ ಕಡೆ ಭೇಟಿ ನೀಡಿ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಭದ್ರತಾ ಸಿದ್ಧತೆ ಪರಿಶೀಲನೆ:  ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಪರ ಮೆರವಣಿಗೆ ಅಥವಾ ನಾಮಪತ್ರ ಸಲ್ಲಿಸಲು ನಿರ್ಬಂಧ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.