

ಬಾಗಲಕೋಟೆ: ಜನತಾದರ್ಶನ ಕಾರ್ಯಕ್ರಮದಲ್ಲಿ ಜನರು ಹೊತ್ತು ತಂದ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ಇತ್ಯರ್ಥಪಡಿಸುವಲ್ಲಿ ಅಧಿಕಾರಿಗಳು ನಿರ್ವಹಿಸಿದ ಕಾರ್ಯ ತೃಪ್ತಿದಾಯಕವಾಗಿದೆ.
ಸಮಸ್ಯೆಗಳಿಗೆ ತುರ್ತು ಸ್ಪಂದನೆ ದೊರೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಇದನ್ನೂ ಓದಿ: ಆಯುರ್ವೇದ ಅರಿತರೆ ಬದುಕು ಅಮೃತ
ಸೀಮಿಕೇರಿ ಗ್ರಾಮದ ಲಡ್ಡುಮುತ್ಯಾ ದೇವಸ್ಥಾನ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಬೀಳಗಿ ಮತಕ್ಷೇತ್ರಕ್ಕೆ ಸಂಬಂಧಿಸಿದ ಜನತಾದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ.
ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರು ಹೊತ್ತು ತಂದ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ ಕಾನೂನಾತ್ಮಕವಾಗಿ ಬಗೆ ಹರಿಯದಿದ್ದರೂ ಅವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಇತ್ತೀಚೆಗೆ ನಡೆಸಿದ ರಾಜ್ಯಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ 38 ಮನವಿಗಳು ಸ್ವೀಕೃತಗೊಂಡಿದ್ದವು. ಅದರಲ್ಲಿ 32 ಅರ್ಜಿಗಳಿಗೆ ಕ್ರಮಕೈಗೊಂಡು ಶೇ.99 ರಷ್ಟು ಪ್ರಗತಿ ಸಾಧಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲೂ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಯಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲು ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲಾಡಳಿತ ಭವನದಲ್ಲಿ ಸೆ.25 ರಂದು ನಡೆದ ಜಿಲ್ಲಾ ಮಟ್ಟದ ಜನತಾದರ್ಶನದಲ್ಲಿ ಸಾರ್ವಜನಿಕರಿಂದ 617 ಕುಂದುಕೊರತೆ ಮನವಿಗಳು ಸ್ವೀಕೃತಗೊಂಡಿದ್ದವು. ಅದರಲ್ಲಿ 471 ಅರ್ಜಿ ವಿಲೇ ಮಾಡಲಾಗಿದೆ.
ತೇರದಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕೃತವಾದ 341 ಅರ್ಜಿಗಳ ಪೈಕಿ 318 ವಿಲೇ ಮಾಡಲಾಗಿದೆ. ರಾಂಪುರ ಗ್ರಾಮದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ 117 ಪೈಕಿ 96 ವಿಲೇ ಮಾಡಲಾಗಿದೆ ಎಂದು ತಿಳಿಸಿದರು.
ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ಸರ್ಕಾರದ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಬೇಜವಾಬ್ದಾರಿ ಹೇಳಿಕೆ ನೀಡದೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು.
ಅರ್ಹ ಕುಟುಂಬಕ್ಕೆ ಪಡಿತರ ಚೀಟಿ ಕೊಡುವ ಕಾರ್ಯವಾಗಬೇಕು. ಶಾಲಾ ಅವಧಿಯಲ್ಲಿ ಯಾವುದೇ ರೀತಿಯ ಖಾಸಗಿ ಟ್ಯೂಷನ್ಗಳನ್ನು ನಡೆಸುವಂತಿಲ್ಲ. ಅಂಥ ಪ್ರಕರಣಗಳು ಕಂಡುಬಂದಲ್ಲಿ ಶಿಕ್ಷಕರ ಮೇಲೆ ಸೂಕ್ತ ಕ್ರಮವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ವಸತಿ ನಿಲಯಗಳಲ್ಲಿ ದಿನೇ ದಿನೇ ದಾಖಲಾತಿ ಪ್ರಮಾಣ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಪ್ರಸ್ತಾವನೆ ನೀಡಿದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುತ್ತದೆ ಎಂದರು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಉಪವಿಭಾಗಾಧಿಕಾರಿಗಳಾದ ಶ್ವೇತಾ ಬೀಡಿಕರ, ಸಂತೋಷ ಕಾಮಗೌಡ ಸೇರಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಯುವನಿಧಿ ಯೋಜನೆ ನೊಂದಣಿಗೆ ಚಾಲನೆ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆ ಅನುಷ್ಠಾನಗೊಳಿಸಲಾಗಿದೆ. 5ನೇ ಯೋಜನೆಯಾದ ಯುವನಿಧಿ ಯೋಜನೆ ನೋಂದಣಿಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಅರ್ಹ ಪದವಿ ಹಾಗೂ ಡಿಪ್ಲೊಮಾ ಪದವಿಧರರು ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.