ಅರಕಲಗೂಡು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚು ಒತ್ತು ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.
ಪಟ್ಟಣದಲ್ಲಿ ಶುಕ್ರವಾರ ರಾತ್ರಿ ವಿವಿಧ ಶಾಲೆಗಳ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳ ಮನೆ ಮನೆಗೆ ಹಾಗೂ ಹಾಸ್ಟೆಲ್‌ಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಕಲಿಕೆ ಪರಿಶೀಲಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಜೀವನದ ಮೊದಲ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ ತಿಂಗಳಲ್ಲಿ ಎದುರಿಸುತ್ತಿದ್ದು, ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಶಿಕ್ಷಣ ಇಲಾಖೆಯ ಜತೆಗೂಡಿ ತಾಲೂಕಿನಾದ್ಯಂತ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಕಲಿಕಾ ವಿಷಯಗಳಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ ಶಿಕ್ಷಕರನ್ನು ಕೇಳಿ ತಿಳಿದುಕೊಳ್ಳಬೇಕು. ಜತೆಗೆ ಪಾಲಕರು ತಮ್ಮ ಮನೆಯಲ್ಲಿ ಮಕ್ಕಳ ಓದಿನ ಅವಧಿಯಲ್ಲಿ ಅವರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಆಗಬೇಕು ಎಂದರು.
ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯದಿದ್ದರೆ ಕಷ್ಟವಾಗಲಿದೆ. ಸರ್ಕಾರ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಶೈಕ್ಷಣಿಕವಾಗಿ ಎಲ್ಲ ಸವಲತ್ತುಗಳನ್ನು ಒದಗಿಸಿದೆ. ಶಿಕ್ಷಕರು ಕೂಡ ಸಾಕಷ್ಟು ಕಲಿಕಾ ಸಿದ್ಧತೆಗಳನ್ನು ಕೈಗೊಂಡು ಫಲಿತಾಂಶ ಉತ್ತಮಪಡಿಸಲು ಶ್ರಮಿಸಿದ್ದಾರೆ. ಉತ್ತಮವಾಗಿ ಓದಿ ಹೆಚ್ಚು ಅಂಕ ಗಳಿಸುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ನಿಮ್ಮ ಭವಿಷ್ಯ ನಿಮ್ಮಲೇ ಅಡಗಿದೆ. ಹೀಗಾಗಿ ಓದಿನ ಕಡೆಗೆ ಆಸಕ್ತಿ ವಹಿಸಿ ಭವಿಷ್ಯದ ಗುರಿ ಸಾಧನೆಗೆ ಮುಂದಾಗಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ್ ಮಾತನಾಡಿ, ಕಳೆದ ಜುಲೈ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಗುಂಪು ಅಧ್ಯಯನ, ರಸಪ್ರಶ್ನೆ ಕಾರ್ಯಕ್ರಮ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪುನಶ್ಚೇತನ ಕಾರ್ಯಾಗಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆ ಜಾರಿಗೊಳಿಸಿದೆ ಎಂದರು.
ವಾರ್ಷಿಕ ಪರೀಕ್ಷೆಗೆ ಮತ್ತಷ್ಟು ಪೂರ್ವತಯಾರಿ ಮಾಡಿಕೊಳ್ಳಲಾಗಿದೆ. ಈ ಬಾರಿ ಜಿಲ್ಲೆಯಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆಯೊಂದಿಗೆ ಉತ್ತಮ ಒಡನಾಟ ಹೊಂದಿರುವ ಶಾಸಕರು ಮಕ್ಕಳ ಮೇಲೆ ಆಸಕ್ತಿ ಇಟ್ಟುಕೊಂಡು ಉತ್ತಮ ಫಲಿತಾಂಶ ಪಡೆಯಲು ಹೆಚ್ಚು ಸಹಕಾರ ನೀಡಿದ್ದಾರೆ. ಮಕ್ಕಳ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಮಕ್ಕಳಲ್ಲಿರುವ ಪರೀಕ್ಷಾ ಭಯ ಹೋಗಲಾಡಿಸಲು ಶ್ರಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲೇ ತಾಲೂಕಿಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದರು.