ಶಿರಸಿ: ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕ ಕೊಂಡಿಯಾಗಿ ಒತ್ತಡದಲ್ಲಿಯೇ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲ ಒತ್ತಡಗಳ ಮಧ್ಯೆಯೂ ವ್ಯಾಯಾಮ, ಯೋಗ, ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಮತ್ತು ಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಕ್ರೀಡಾಪಟುಗಳಿಗೆ ಕ್ರೀಡಾ ಜ್ಯೋತಿ ಹಸ್ತಾಂತರಿಸಿ ಮಾತನಾಡಿ, ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಜಿಲ್ಲೆಯ ಪ್ರತಿಯೊಬ್ಬ ನೌಕರರಿಗೆ ಪರಸ್ಪರ ಮುಖಾಮುಖಿ ಭೇಟಿಗೆ ಇಂತಹ ಕ್ರೀಡಾಕೂಟ ಸಹಕಾರಿಯಾಗಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ಅಧಿಕಾರಿ ಈಶ್ವರ ಕಾಂದೂ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಪಂನ ಎಲ್ಲ ಶಾಖೆಗಳ ಮುಖ್ಯಸ್ಥರು, ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಸಹಕಾರದೊಂದಿಗೆ ಈ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪಿಡಿಒಗಳನ್ನು ಗುರುತಿಸಿ ನೀಡಲಾಗುವ ಬೆಸ್ಟ್ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿ ವಿಜೇತ ವಿವಿಧ ಗ್ರಾಮ ಪಂಚಾಯಿತಿಗಳ ಒಟ್ಟು 16 ಪಿಡಿಒಗಳನ್ನು ಸನ್ಮಾಸಲಾಯಿತು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲೆಯ 12 ತಾಲೂಕು ಪಂಚಾಯತಿಗಳಿಂದ ಸ್ಥಳೀಯ ಸಾಂಸ್ಕೃತಿಕ ಕಲೆ, ವೃತ್ತಿ, ಸಮುದಾಯ ಪ್ರತಿಬಿಂಬಿಸುವ ವೇಷಭೂಷಣ ತೊಟ್ಟ ಅಧಿಕಾರಿಗಳು, ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.