

ತುಮಕೂರು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮದುವೆಗೆ ಹೊರಟಿದ್ದ ದಂಪತಿ, ಸ್ಥಳದಲ್ಲೇ ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆಯೊಂದು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗೇಟ್ ಬಳಿ ನಡೆದಿದೆ. ರಘು(35), ಅನುಷಾ(28) ಮೃತ ದುರ್ದೈವಿಗಳು.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ಜಿಲ್ಲೆ ಅರಸೀಕೆರೆ ಮೂಲದ ರಘು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಡನಹಳ್ಳಿ ಗ್ರಾಮದ ಅನುಷಾ ಎಂಬಾಕೆಯ ಜತೆಗೆ ಕಳೆದೆ ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ದಂಪತಿ, ಇಂದು ಸಂಬಂಧಿಕರೊಬ್ಬರ ಮದುವೆಗೆ ಕಾರಿನಲ್ಲಿ ತೆರಳುತ್ತಿದ್ದರು.
ಚಿಕ್ಕನಾಯಕನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಕಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.