ಶಿವಮೊಗ್ಗ: ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಉತ್ತೇಜಿಸಬೇಕು. ಇದು ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸಹಕಾರಿ ಆಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲ ಭವನ ಸೊಸೈಟಿ, ಶಿವಮೊಗ್ಗ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿಯಿಂದ ಮಕ್ಕಳ ದಿನಾಚರಣೆ ನಿಮಿತ್ತ 6ರಿಂದ16 ವರ್ಷದೊಳಗಿನ ಮಕ್ಕಳ ಜಿಲ್ಲಾ ಮಟ್ಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಸದಾ ಓದಿಕೊಳ್ಳುವಂತೆ ಮಕ್ಕಳ ಮೇಲೆ ಪಾಲಕರು ಒತ್ತಡ ಹಾಕಬಾರದು. ನಾನಾ ಸ್ಪರ್ಧೆ ಅಥವಾ ಕ್ರೀಡೆಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಮಾಡಬೇಕು. ಇದರಿಂದ ಮಕ್ಕಳು ಒತ್ತಡದಿಂದ ಮುಕ್ತರಾಗಿ ಓದಿನಲ್ಲೂ ಆಸಕ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇದೇ ವೇಳೆ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಾದ್ಯ ಸಂಗೀತ, ಚಿತ್ರಕಲೆ, ವಿಜ್ಞಾನದಲ್ಲಿ ಆವಿಷ್ಕಾರ ಸಹಿತ ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ಮತ್ತು ಅಭಿನಂದನಾ ಪತ್ರ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಾ. ಎಚ್.ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಇತರರಿದ್ದರು.