More

  ವಸ್ತು ಖರೀದಿಗೂ ಮುನ್ನ ಗುಣಮಟ್ಟ ಖಾತ್ರಿಪಡಿಸಿಕೊಳ್ಳಿ

  ಚಿಕ್ಕಮಗಳೂರು: ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು. ಗ್ರಾಹಕರ ಹಿತಾಸಕ್ತಿ ಕಾಯಲು ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದು, ಪ್ರತಿಯೊಬ್ಬರೂ ಕಾನೂನುಗಳನ್ನು ತಿಳಿದುಕೊಳ್ಳುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ತಿಳಿಸಿದರು.

  ನಗರದ ಟಿಎಂಎಸ್ ಸವೂರ್ ಹಾಲ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಸೇವಾ ಪ್ರಾಧಿಕಾರದಿಂದ ಆಯೋಜಿಸಿದ್ದ ಗ್ರಾಹಕ ಸಮಸ್ಯೆಗಳ ಹಾಗೂ ಹಕ್ಕುಗಳ ಕುರಿತ ವಿವಿಧ ಇಲಾಖೆಗಳು ಮತ್ತು ಗ್ರಾಹಕರೊಂದಿಗೆ ಸಂವಾದ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
  ಗ್ರಾಹಕರಿಗೆ ತಮ್ಮ ಹಕ್ಕುಗಳ ಮಹತ್ವವನ್ನು ಮನವರಿಕೆ ಮಾಡಿಕೊಡುವ ಹಾಗೂ ಇತರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಗ್ರಾಹಕರ ದಿನ ಆಚರಿಸಲಾಗುತ್ತದೆ ಎಂದರು.
  ತಾವು ಖರೀದಿಸಿದ ವಸ್ತುಗಳು ಹಾಗೂ ಅದರ ಸೇವೆಗಳ ಗುಣಮಟ್ಟದಿಂದ ಕೂಡಿವೆಯೋ, ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿಸಲಾದ ವಸ್ತುವಿನ ಬಿಲ್ ಅನ್ನು ಕಡ್ಡಾಯವಾಗಿ ಪಡೆಯಬೇಕು. ಮೋಸ ಮಾಡುವವರು ತುಂಬ ಚಾಣಾಕ್ಷ ನಡೆ ಅನುಸರಿಸುತ್ತಾರೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರೂ ಸುಶಿಕ್ಷಿತರಾಗಿರಬೇಕು. ಅದರಲ್ಲೂ ತಂತ್ರಜ್ಞಾನ ತಿಳಿದುಕೊಳ್ಳಬೇಕು. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ ಎಚ್ಚರವಹಿಸಬೇಕು. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿಯಲ್ಲಿ ಮತ್ತು ಕಲಬೆರಕೆ ಬಗ್ಗೆ ಎಚ್ಚರ ವಹಿಸಲು ಸಾಧ್ಯ ಎಂದು ಹೇಳಿದರು.
  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಡಾ. ಮಂಜುನಾಥ್ ಎಂ. ಬಮ್ಮನಕಟ್ಟಿ ಮಾತನಾಡಿ, ಸಮಾಜದಲ್ಲಿ ಒಬ್ಬರನ್ನೊಬ್ಬರು ಅವಲಂಬಿಸಿರುವುದರಿಂದ ದಿನನಿತ್ಯ ಜೀವನಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತವಾಗಿರಬೇಕು ಎಂದು ತಿಳಿಸಿದರು.
  ಗ್ರಾಹಕರ ಹಕ್ಕು ಮತ್ತು ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದ ವಕೀಲ ಡಿ.ಬಿ.ಸುಜೇಂದ್ರ, ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯವಹಾರ ಹಾಗೂ ಆನ್‌ಲೈನ್‌ನಲ್ಲಿ ಖರೀದಿಸುವ ಗ್ರಾಹಕರಿಗೆ ಎಷ್ಟು ಅನುಕೂಲವೋ ಅಷ್ಟೇ ವಂಚನೆ ಪ್ರಕರಣಗಳು ಕೂಡ ಹೆಚ್ಚು. ಈ ಬಗ್ಗೆ ಗ್ರಾಹಕರು ಎಚ್ಚರಿಕೆಯಿಂದ ವ್ಯವಹಾರ ಮಾಡುವ ಜತೆಗೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಬಹಳ ಮುಖ್ಯ ಎಂದು ಹೇಳಿದರು.
  ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್.ಚನ್ನಕೇಶವ, ಕಾರ್ಯಾಧ್ಯಕ್ಷ ವೈ.ಎಸ್.ಸಿದ್ದಯ್ಯ, ಶಾರದಾ ಸ್ಕೂಲ್ ಆಫ್ ಲಾ ಪ್ರಾಧ್ಯಾಪಕಿ ಎಚ್.ಎನ್.ಮಾನಸಾ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎಂ.ಎಚ್.ಶ್ರೀನಿವಾಸ್, ಗ್ರಾಹಕರ ವ್ಯಾಜ್ಯಗಳ ಆಯೋಗದ ರಿಜಿಸ್ಟ್ರಾರ್ ಇಂದುಮತಿ ಇತರರಿದ್ದರು.

  See also  ಹಿಜಾಬ್ ನಿಷೇಧ ವಾಪಸ್: ಸರ್ಕಾರದ ನಡೆಗೆ ಬಿಜೆಪಿ ಆಕ್ರೋಶ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts