ಹುಬ್ಬಳ್ಳಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಎಲ್ಲಿಯೂ ಜನಬೆಂಬಲ ವ್ಯಕ್ತವಾಗುತ್ತಿಲ್ಲ, ಪ್ರಚಾರಕ್ಕೆ ಜನರನ್ನು ಸೇರಿಸಲು ಹರಸಾಹಸ ಪಡುತ್ತಿದ್ದಾರೆ, ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ತೆರಳುವ ಮುನ್ನ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ. ಪಕ್ಷ ಎಲ್ಲ ಕಡೆ ಜಯಭೇರಿ ಬಾರಿಸುವುದು ನಿಶ್ಚಿತ. ಇದನ್ನು ಸಹಿಸಲಾಗದೇ ಸಿದ್ದರಾಮಯ್ಯನವರು ಉದ್ದೇಶಪೂರ್ವಕವಾಗಿ ಬಿಜೆಪಿ ಹಾಗೂ ನಮ್ಮ ಮೇಲೆ ಇಲ್ಲಸಲ್ಲದ ಆರೋಪ, ಹಗರಣಗಳ ಹೆಸರಲ್ಲಿ ಬೆದರಿಕೆ ಒಡ್ಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅದನ್ನು ಎದುರಿಸಲು ನಾವು ಸಿದ್ಧ ಎಂದು ಗುಡುಗಿದರು.
ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಬಕಾರಿ ಇಲಾಖೆಯೊಂದರಲ್ಲಿಯೇ ಎಷ್ಟೊಂದು ಅಕ್ರಮ ನಡೆಯುತ್ತಿದೆ ಎಂದು ಗುತ್ತಿಗೆದಾರರೇ ಹೇಳಿದ್ದಾರೆ. ರೈತರಿಗೂ ಅನ್ಯಾಯ ಮಾಡುತ್ತಿದ್ದಾರೆ. ಇಂತಹ ಹತ್ತಾರು ಭ್ರಷ್ಟಾಚಾರ ಪ್ರಕರಣಗಳು ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿವೆ. ಇವೆಲ್ಲ ಉಪಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿವೆ. ಜನ ಬಿಜೆಪಿ ಪರವಾಗಿದ್ದಾರೆ. ಹಾಗಾಗಿ ಫಲಿತಾಂಶದ ನಂತರ ಸಿಎಂ ಏನು ಹೇಳುತ್ತಾರೆ ನೋಡೋಣ ಎಂದು ಸವಾಲು ಹಾಕಿದರು.