ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಎರಡನೇ ಲಿಸ್ಟ್ ರಿಲೀಸ್ ಮಾಡುವ ಸಾಧ್ಯತೆ ಕೂಡ ಹೆಚ್ಚಿದೆ.
ಇನ್ನೂ ಬಿಜೆಪಿಯ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ಡಿ.ವಿ. ಸದಾನಂದಗೌಡರಿಗೆ ಈ ಬಾರಿಯ ಟಿಕೆಟ್ ಕೈತಪ್ಪಿದ್ದು, ಕಣದಿಂದ ಹಿಂದೆ ಸರಿಯುವುದಾಗಿ ಮಾಜಿ ಸಿಎಂ ಸದಾನಂದಗೌಡ ಮಾರ್ಮಿಕವಾಗಿ ನುಡಿದಿದ್ದಾರೆ. ಅದಕ್ಕೆ ಪೂರಕವೆಂಬಂತೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ.
— Sadananda Gowda (@DVSadanandGowda) March 13, 2024
ಇದನ್ನೂ ಓದಿ: ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ಗೆ ಶಾಕ್; ಗಾಯದ ಸಮಸ್ಯೆಯಿಂದ ಸ್ಟಾರ್ ಆಟಗಾರ ಅಲಭ್ಯ
ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಮಾಜಿ ಸಿಎಂ ಸದಾನಂದಗೌಡ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇತ್ತ ಮಾಜಿ ಸಿಎಂ, ಹಾಲಿ ಸಂಸದ ಸದಾನಂದಗೌಡ ಕಣದಿಂದ ಹಿಂದೆ ಸರಿಯುವ ಬಗ್ಗೆ ಮಾರ್ಮಿಕವಾಗಿ ನುಡಿದ ಬೆನ್ನಲ್ಲೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂದು ಕಾದು ನೋಡಬೇಕಿದೆ.