

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡ ಮಾಜಿ ಕೋಚ್ ತುಷಾರ್ ಅರೋಥೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಷಾರ್ ಅವರ ಮನೆಯಲ್ಲಿ 1 ಕೋಟಿ ರೂ. ಹಣ ಪತ್ತೆಯಾದ ಹಿನ್ನಲೆಯಲ್ಲಿ ಅವರನ್ನು ವಡೋದರಾ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ವಡೋದರದ ಪತ್ಪರ್ಗಂಜ್ ಪ್ರದೇಶದಲ್ಲಿರುವ ತುಷಾರ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಇರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಪೆಷಲ್ ಆಪರೇಷನ್ ಗ್ರೂಪ್ (SOG) ದಾಳಿ ನಡೆಸಿತ್ತು. ದಾಳಿಯ ವೇಳೆ ಹಣದ ಮೂಲ ಸೇರಿದಂತೆ ಸ್ಪಷ್ಟ ಉತ್ತರ ಸಿಗದ ಹಿನ್ನಲೆಯಲ್ಲಿ ತುಷಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಡೋದರಾ ಪೊಲೀಸರು, ತುಷಾರ್ ಅವರ ಮನೆ ಮೇಲೆ ದಾಳಿ ಮಾಡಿದಾಗ ಬೂದು ಬಣ್ಣದ ಬ್ಯಾಗ್ ಒಂದರಲ್ಲಿ 1.01 ಕೋಟಿ ರೂ, ಹಣ ಪತ್ತೆಯಾಗಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಅವರು ಯಾವುದಕ್ಕೂ ಸ್ಪಷ್ಟ ಉತ್ತರ ನೀಡಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2019ರಲ್ಲಿ ಐಪಿಎಲ್ ನಡೆಯುತ್ತಿದ್ದ ವೇಳೆ ಬೆಟ್ಟಿಂಗ್ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ತುಷಾರ್ ಅರೋಥೆ ಸೇರಿದಂತೆ 19 ಜನರನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ನಡೆಸಿದ ಬಳಿಕ ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಹಿನ್ನಲೆ ಪೊಲೀಸರು ಅವರನ್ನು ಬಿಟ್ಟು ಕಳುಹಿಸಿದ್ದರು.
ಈ ಹಿಂದೆ ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ತುಷಾರ್ ಅರೋಥೆ 2018ರಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ 2017 ರಲ್ಲಿ ತುಷಾರ್ ಅವರ ಕೋಚಿಂಗ್ ಸಾರಥ್ಯದಲ್ಲಿ ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್ನಲ್ಲಿ ಫೈನಲ್ಗೆ ಪ್ರವೇಶಿಸಿತ್ತು. ಆದರೆ ಇದಾದ ಬಳಿಕ ತುಷಾರ್ ಅರೋಥೆ ವಿವಾದಗಳಿಂದ ಹೆಚ್ಚು ಸುದ್ದಿಯಾಗುತ್ತಿದ್ದಾರೆ.