More

    ಸುರಕ್ಷತೆ ಕಾಯ್ದು ಪರೀಕ್ಷೆ

    ಉಡುಪಿ: ಮಕ್ಕಳ ಆರೋಗ್ಯವನ್ನು ಗಮನದಲ್ಲಿರಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆ ವೇಳೆ ಕೊಠಡಿಯಲ್ಲಿ ಸಾಮಾನ್ಯವಾಗಿ 24 ವಿದ್ಯಾರ್ಥಿಗಳಿರುತ್ತಾರೆ. ಆದರೆ, ಈ ಬಾರಿ 18 ಮಕ್ಕಳು ಮಾತ್ರ ಇರಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

    ಜಿಪಂ ಕಚೇರಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಪರೀಕ್ಷಾ ಪೂರ್ವಸಿದ್ಧತೆ ಮತ್ತು ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
    ಪ್ರತೀ ವಿದ್ಯಾರ್ಥಿ ಮತ್ತು ಡೆಸ್ಕ್ ನಡುವೆ ಕನಿಷ್ಠ 3.5 ಅಡಿ ಅಂತರ ಕಾಯ್ದುಕೊಳ್ಳಲಾಗುತ್ತದೆ. ಎಲ್ಲ ಮಕ್ಕಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಮಗುವಿಗೆ ಎರಡು ಮಾಸ್ಕ್ ಉಚಿತವಾಗಿ ನೀಡಲಾಗುತ್ತದೆ. ಮಕ್ಕಳ ಕೈಗೆ ಸ್ಯಾನಿಟೈಸರ್ ಹಾಕಲಾಗುತ್ತದೆ. ಪ್ರತಿ 200 ಮಕ್ಕಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗುತ್ತಿದೆ. ಮಕ್ಕಳು ಕುಡಿಯುವ ನೀರನ್ನು ಮನೆಯಿಂದಲೇ ತರಬೇಕು ಎಂದು ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಮೊದಲು ಹಾಗೂ ನಂತರ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಅವರು ತಿಳಿಸಿದರು.

    ಸಾರಿಗೆ ವ್ಯವಸ್ಥೆ: ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡಲು ಹೈಕೋರ್ಟ್ ಸೂಚನೆ ನೀಡಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಜತೆಗೆ ಈ ಬಗ್ಗೆ ಸಭೆ ನಡೆಸಲಾಗಿದೆ. ಸಾರಿಗೆ ವ್ಯವಸ್ಥೆಗಾಗಿ ಮಕ್ಕಳ ಸಮೀಕ್ಷೆ ನಡೆಸಲಾಗುತ್ತಿದೆ. ರೂಟ್ ಮ್ಯಾಪ್ ತಯಾರಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

    ಪುನರ್‌ಮನನ ಕಾರ್ಯಕ್ರಮ: ಪಠ್ಯಗಳ ಸಂಶಯ ನಿವಾರಣೆಗಾಗಿ ಜೂನ್ 12ರಿಂದ 20ರವರೆಗೆ ಕೊನೆಯ ಸುತ್ತಿನ ಪುನರ್ಮನನ ಕಾರ್ಯಕ್ರಮ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು. ಆನ್‌ಲೈನ್ ಮೂಲಕ ಅಧ್ಯಾಪಕರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಈ ಬಗ್ಗೆ ತಾಲೂಕು ಶಿಕ್ಷಣಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಸ್ಥಳೀಯ ಚಾನಲ್‌ಗಳನ್ನೂ ಇದಕ್ಕೆ ಬಳಸಿಕೊಳ್ಳಬಹುದು. ವಿವಿಧ ಜಿಲ್ಲೆಗಳಿಂದ ಸ್ವಂತ ಊರಿಗೆ ಮರಳಿರುವ ವಲಸೆ ಕಾರ್ಮಿಕರ ಮಕ್ಕಳು ಊರಲ್ಲೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts