ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬಂದಿರುವ ಭ್ರಷ್ಟಾಚಾರ(Excise Department Corruption) ಆರೋಪದ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆ ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು(Mukyamantri Chandru) ಆಗ್ರಹಿಸಿದ್ದಾರೆ.
ಈ ಬಗ್ಗೆ ಸಿಎಂಗೆ ಪತ್ರ ಬರೆದಿರುವ ಅವರು, ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳೇ ಸಚಿವರಿಗೆ ಲಂಚವನ್ನು ತಲುಪಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಹಾಗಾಗಿ ಕೂಡಲೇ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಅವ್ಯವಹಾರ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಬಿಜೆಪಿ ಅವಧಿಯಲ್ಲೂ ಅಬಕಾರಿ ಇಲಾಖೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಬಕಾರಿ ಇಲಾಖೆಯಲ್ಲಿ ಈವರೆಗೆ ಸುಮಾರು 900 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಸಚಿವರಿಗೆ ಪ್ರತಿ ತಿಂಗಳು ಮಾಮೂಲಿ ಕೊಡಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳೇ ಮದ್ಯದಂಗಡಿಗಳಲ್ಲಿ ಹಫ್ತಾ ವಸೂಲಿ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಮದ್ಯ ಮಾರಾಟಗಾರರ ಸಂಘವೇ ಸಚಿವರ ವಿರುದ್ಧ ಆರೋಪ ಮಾಡಿದೆ ಎಂದರೆ ಇಲ್ಲಿ ಭ್ರಷ್ಟಾಚಾರ ಮಿತಿಮೀರಿರುವುದು ಸ್ಪಷ್ಟವಾಗಿದೆ ಕೂಡಲೇ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ತಿಮ್ಮಾಪುರ ಅವರನ್ನು ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ತನಿಖೆಗೆ ಆದೇಶ ಕೊಡಬೇಕು. ಈ ವಿಚಾರದಲ್ಲಿ ನೀವು ಮೌನವಾಗಿದ್ದರೆ ಈ ಭ್ರಷ್ಟಾಚಾರಕ್ಕೆ ನಿಮ್ಮ ಒಪ್ಪಿಗೆ ಕೂಡ ಇದೆ ಎನ್ನುವ ಕೆಟ್ಟ ಸಂದೇಶ ರವಾನಿಸದಂತಾಗುತ್ತದೆ. ಈ ಕೂಡಲೇ ಕ್ರಮ ತೆಗೆದುಕೊಂಡು ತಾವು ಭ್ರಷ್ಟಾಚಾರವನ್ನು ಸಹಿಸಲ್ಲ ಎನ್ನುವ ಸಂದೇಶ ಕೊಡಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಮೊಟ್ಟೆ ಹಂಚಿಕೆ ಅಕ್ರಮ ತನಿಖೆ ಮಾಡಿ
ಉದ್ಯಮಿ ಅಜೀಂ ಪ್ರೇಮ್‌ಜೀ ಫೌಂಡೇಷನ್ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ ನೀಡುವ ಯೋಜನೆಗೆ 1,500 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಆದರೆ ಮೌಲ್ಯಮಾಪನ ಅಧ್ಯಯನ ವರದಿಯಲ್ಲಿ ಮಕ್ಕಳಿಗೆ ಮೊಟ್ಟೆಯನ್ನೇ ಕೊಡುತ್ತಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಹೀಗೆ ದಾನಿಗಳು ಕೊಡುವ ಹಣದಲ್ಲೂ ಭ್ರಷ್ಟಾಚಾರ ಮಾಡಿದರೆ ಮುಂದಿನ ದಿನಗಳಲ್ಲಿ ದಾನ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಸರ್ಕಾರ ಇದ್ದಾಗ ಮೊಟ್ಟೆ ಪೂರೈಕೆಯಲ್ಲಿ ಕಮಿಷನ್ ಪಡೆದ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಅವಧಿಯಲ್ಲಿ ಮೊಟ್ಟೆಯನ್ನೇ ಕೊಡದೆ ವಂಚನೆ ಮಾಡಲಾಗುತ್ತಿದೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ನೀವುಗಳು ಈಗ ಮಾಡುತ್ತಿರುವುದು ಏನು ಎಂದು ನಿಮ್ಮನ್ನು ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಗ್ರಾಮೀಣ, ಬಡ ಮಕ್ಕಳಿಗೆ ಮೊಟ್ಟೆ ವಿತರಿಸಲು ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.