ಶಿವಮೊಗ್ಗ: ಜಿಲ್ಲೆಯಲ್ಲಿ ಮಾ.21ರಿಂದ ಏಪ್ರಿಲ್ 4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಇದೇ ಮೊದಲ ಬಾರಿಗೆ ಕೃತಕ ತಂತ್ರಜ್ಞಾನ ಬಳಸಿ ಫೇಸ್ ಡಿಟೆಕ್ಷನ್ ಮಾಡಲಾಗುವುದು ಎಂದು ಜಿಪಂ ಸಿಇಒ ಎನ್.ಹೇಮಂತ್ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನಿಯೋಜಿತಗೊಂಡ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಕಳೆದ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುತ್ತಿವೆ. ಈ ಬಾರಿಯೂ ಶಿಸ್ತಿನಿಂದ ಪರೀಕ್ಷೆಗಳು ನಡೆಯಬೇಕು. ಕಳೆದ ವರ್ಷದಿಂದ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವೆಬ್‌ಕಾಸ್ಟಿಂಗ್‌ನಲ್ಲಿ 3 ಹಂತದಲ್ಲಿ ವೀಕ್ಷಣೆ ಮಾಡಲಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೊಠಡಿಯಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕಿದೆ ಎಂದರು.
ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷೆ ನಿಯೋಜಿತ ಅಧಿಕಾರಿಗಳು ಎಚ್ಚರಿಕೆಯಿಂದ ಪರೀಕ್ಷೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿ ಈ ಬಾರಿಯೂ ಉತ್ತಮ ಫಲಿತಾಂಶ ಲಭಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಜೆರಾಕ್ಸ್ ಅಂಗಡಿಗಳು ಅಲ್ಲಿ ಕಾರ್ಯನಿರ್ವಹಿಸುವಂತಿಲ್ಲ. ಮೊಬೈಲ್ ಸೇರಿ ಯಾವುದೇ ವಿದ್ಯುನ್ಮಾನ ಉಪಕರಣಗಳಿಗೆ ಅವಕಾಶವಿಲ್ಲ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಓಆರ್‌ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಬೇಕು. ಪರೀಕ್ಷಾ ಸಿಬ್ಬಂದಿ ಮತ್ತು ಜಾಗೃತ ದಳ ಅಧಿಕಾರಿಗಳನ್ನು ಹೊರತುಪಡಿಸಿ ಇನ್ನಾವ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಇಲ್ಲ ಎಂದರು.
ಎಎಸ್‌ಪಿ ಅನಿಲ್‌ಕುಮಾರ್ ಭೂಮರಡ್ಡಿ, ಡಿಡಿಪಿಐ ಎಸ್.ಆರ್.ಮಂಜುನಾಥ, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ(ಪ್ರಾಥಮಿಕ ಶಿಕ್ಷಣ) ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸಿಪ್ರಿಯನ್ ಮೊಂತೆಯೋ, ಡಯಟ್‌ನ ಪ್ರಾಂಶುಪಾಲ(ಪ್ರಭಾರ) ಡಾ. ಜಿ.ವಿ.ಹರಿಪ್ರಸಾದ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯ 79 ಕೇಂದ್ರಗಳಲ್ಲಿ ಪರೀಕ್ಷೆ
79 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 23,162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23,997 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿ ಮೂಲಭೂತ ಸೌಕರ್ಯಗಳ ಸೂಕ್ತ ವ್ಯವಸ್ಥೆ ಇರುವುದನ್ನು ಬಿಇಒಗಳು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಎನ್.ಹೇಮಂತ್ ಸೂಚಿಸಿದರು.