ರೈತರ ಬೆನ್ನಿಗೆ ನಿಂತ ತಾಪಂ

ಬೆಳಗಾವಿ: ನಗರದ ಹೊರ ವಲಯದಲ್ಲಿ ವರ್ತುಲ ರಸ್ತೆ (ರಿಂಗ್ ರೋಡ್) ನಿರ್ಮಾಣದಿಂದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ‘ವಿಶೇಷ ಸಮಿತಿ ರಚನೆ’ಗೆ ಗುರುವಾರ ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರು ಠರಾವು ಕೈಗೊಂಡಿದ್ದಾರೆ.

ರಿಂಗ್ ರೋಡ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯವು ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಸಭೆಯಲ್ಲಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.
ಸರ್ಕಾರ ಸುಮಾರು 68.3 ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ 427 ಹೆಕ್ಟೇರ್ ಜಮೀನು ಸ್ವಾಧೀನಪಡಿಸಿಕೊಳ್ಳಲು ಜ.3ರಂದು ಅಧಿಸೂಚನೆ ಹೊರಡಿಸಿದೆ. ಆದರೆ, ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಸೂಕ್ತ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರು ಭೂಮಿ ಕಳೆದುಕೊಳ್ಳುತ್ತಿದ್ದಾರೆ.

ಇದರಿಂದ ನೂರಾರು ರೈತ ಕುಟುಂಬ ಬೀದಿ ಪಾಲಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ರೈತರ ವಾಸ್ತವ ಸ್ಥಿತಿ ಅರಿತು ಸರ್ಕಾರಕ್ಕೆ ಸತ್ಯಾಸತ್ಯತೆ ವರದಿ ಸಲ್ಲಿಸಲು ತಾಪಂ ಸದಸ್ಯರ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿ ರಚನೆ ಅವಶ್ಯಕವಾಗಿದೆ ಎಂದು ಸದಸ್ಯರು ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿದ ಅಧ್ಯಕ್ಷ ಶಂಕರಗೌಡ ಪಾಟೀಲ, ರೈತರ ಹಿತದೃಷ್ಟಿಯಿಂದ ಮತ್ತು ಸದಸ್ಯರ ಒತ್ತಾಯದ ಮೇರೆಗೆ ತಾಪಂ ಸದಸ್ಯರನ್ನು ಒಳಗೊಂಡ ಸಮಿತಿ ರಚನೆಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಸಮಿತಿಯು ರೈತರ ಮನೆಗಳಿಗೆ ಭೇಟಿ ನೀಡಲಿದೆ ಎಂದು ತಿಳಿಸಿದರು.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ. ಅಧಿಕಾರಿಗಳು ಬಯಲು ಶೌಚ ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಿದ್ದಾರೆ. ಆದರೆ, ವಾಸ್ತವದಲ್ಲಿ ಬಯಲು ಶೌಚ ಪದ್ಧತಿ ಇನ್ನೂ ಜೀವಂತವಾಗಿದೆ. ಹಳ್ಳಿಗಳ ಜನಸಂಖ್ಯೆಗಿಂತ ದಾಖಲೆಗಳಲ್ಲಿ ಶೌಚಗೃಹಗಳ ಸಂಖ್ಯೆ ಹೆಚ್ಚಿದೆ. ಸರ್ಕಾರದ ಅನುದಾನ ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.